ಬೆಂಗಳೂರು: ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ (Congress) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ.
ಕಲಬುರಗಿಯಲ್ಲಿ (Kalaburagi) ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವಿಎಂ ಬದಲಿಗೆ ಮರುಮತಪತ್ರ ಬಳಸಿ ಚುನಾವಣೆ ನಡೆಸುವಂತೆ ಆಗ್ರಹಿಸಿದರು.
ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹಕ್ಕನ್ನು ಕಸಿದುಕೊಂಡು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರಗಳನ್ನು ವಜಾಗೊಳಿಸಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ರಾಷ್ಟ್ರಮಟ್ಟದಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಚುನಾವಣಾ ಆಯುಕ್ತರ ತಪ್ಪುಗಳನ್ನು ರಕ್ಷಿಸುವ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಕೇಂದ್ರವು ಆಯೋಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.
ಚುನಾವಣಾ ಆಯೋಗದ ಮೂಲಕ ಎಸ್‌ಐಆರ್ ಹೆಸರಿನಲ್ಲಿ ಬಿಜೆಪಿ ಪರವಾಗಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ತಿರುಚುವಿಕೆ ನಡೆಯುತ್ತಿದೆ ಎಂದು ಖರ್ಗೆ ವಾಗ್ದಾಳಿ ನಡೆಸಿದರು.
ಫಾರ್ಮ್ 6 ಮತ್ತು 7 ಅನ್ನು ಬೇಕಂತಲೇ ಬಳಸಿ ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ಹೆಸರುಗಳನ್ನು ಸೇರಿಸುವುದು ಮತ್ತು ಅಳಿಸುವುದು ಮಾಡಲಾಗುತ್ತಿದೆ.
ರಾಜಕೀಯ ಅರಿವಿಲ್ಲದ ಹಾಗೂ ಮುಗ್ಧ ಜನರ ಮತಾಧಿಕಾರವನ್ನು ಕಿತ್ತುಕೊಳ್ಳುವ ಈ ಷಡ್ಯಂತ್ರವನ್ನು ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದರು.
ಇತ್ತೀಚೆಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ಅಕ್ರಮಗಳ ವಿರುದ್ಧ ಒಟ್ಟಾಗಿ ಹೋರಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.


