ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ 46,000 ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಿಯು ಕಾಲೇಜು ಪ್ರಾಂಶುಪಾಲರು ಹಾಗೂ ಡಿಡಿಪಿಐ, ಡಿಡಿಪಿಯು, ಬಿಇಒ ಸೇರಿದಂತೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು.
ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ:
ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಿದ್ದಾರೆ, ಎಂದು ಸಚಿವರು ಹೇಳಿದರು.
ಇದೇ ಸಂದರ್ಭದಲ್ಲಿ, ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಏಕಕಾಲದಲ್ಲಿ ನಡೆಯುವ ‘ಮಹಾ ಪೋಷಕ-ಶಿಕ್ಷಕರ ಸಭೆ’ (Mega PTM) ಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ ಎಂದು ಸಚಿವರು ಪ್ರಕಟಿಸಿದರು.
ಇದೇ ಶಾಲಾ ಪ್ರಾರಂಭೋತ್ಸವದ ಶುಭ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ (KPS) ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೆಪಿಎಸ್ ಶಾಲೆಗಳ ಉದ್ದೇಶ, ಗುಣಮಟ್ಟ ಮತ್ತು ಅಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ಪೋಷಕರಿಗೆ ಸ್ಪಷ್ಟ ಮಾಹಿತಿ ಒದಗಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.


