ಮೈಸೂರು: ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು (Congress) ಗೆಲುವಿನತ್ತ ಕೊಂಡೊಯ್ಯುವ ವಿಶ್ವಾಸದೊಂದಿಗೆ ಕಾರ್ಯಕರ್ತರು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಎಐಸಿಸಿ (AICC) ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ (Siddaramaiah) ಕರೆ ನೀಡಿದರು.
ಮೈಸೂರಿನ ಉತ್ತನಹಳ್ಳಿ ಸಮೀಪದ ಭಾನವಿ ಪ್ಯಾಲೇಸ್‌ನಲ್ಲಿ ನಡೆದ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಎಲ್ಲ ಸಮುದಾಯಗಳನ್ನೂ ಒಳಗೊಂಡಿರುವ ಪಕ್ಷವಾಗಿದ್ದು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು. ಮೈಸೂರು ಜಿಲ್ಲೆಯಲ್ಲಿ ಪಕ್ಷಕ್ಕೆ ಉತ್ತಮ ನೆಲೆ ಇದ್ದು, ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ತಾವು ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.


