ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಪ್ರಧಾನಿ ಮೋದಿ ಮೇ 10ರ ಭಾನುವಾರ ಬೆಳಿಗ್ಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಎರಡು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ಪ್ರಧಾನಿ ಮೋದಿಯವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ಸಮಾರಂಭ ನಡೆಯಲಿದೆ. ಪ್ರಧಾನಿ ಮೋದಿಯವರಿಗೆ ಮೈಸೂರು ಪೇಟ, ರೇಷ್ಮೆ ಶಾಲು ಹೊದಿಸಿ ಸನ್ಮಾನಿಸಲಿದ್ದು, ಅವರು ಸುಮಾರು ಅರ್ಧ ಗಂಟೆ ಭಾಷಣ ಮಾಡಲಿದ್ದಾರೆ.
ನಂತರ ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಇಂಟರ್ನ್ಯಾಷನಲ್ ಸೆಂಟರ್ ನಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಧ್ಯಾನ ಮಂದಿರ ಅನಾವರಣಗೊಳಿಸಿ ವಿಶೇಷ ವಿಮಾನದಲ್ಲಿ ತೆಲಂಗಾಣಕ್ಕೆ ತೆರಳದಿದ್ದಾರೆ.
ಹೆಚ್‌ಎಎಲ್ ವಿಮಾನ ನಿಲ್ದಾಣದ ಸಮೀಪ ನಡೆಯುವ ಪ್ರಧಾನಿ ಮೋದಿ ಅವರ ಅಭಿನಂದನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಸೇರಿದಂತೆ ಹಲವರು ಉಪಸ್ಥಿತರಿರುವರು. 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

