ಬೆಂಗಳೂರು : ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ನಮ್ಮ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಬೆಂಗಳೂರಿಗೆ (Bengaluru) ಭೇಟಿ ನೀಡಲಿದ್ದಾರೆ. ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಯಾವುದೇ ರೀತಿಯ ಭದ್ರತಾ ಲೋಪವಾಗದಂತೆ ನಗರ ಪೊಲೀಸರು ಮತ್ತು ವಿಶೇಷ ಭದ್ರತಾ ಪಡೆ (SPG) ಕಟ್ಟೆಚ್ಚರ ವಹಿಸಿವೆ.
10 ದಿನಗಳ ಹಿಂದೆಯೇ ಎಸ್‌ಪಿಜಿ ತಂಡ ಬೆಂಗಳೂರಿಗೆ ಆಗಮಿಸಿ, ಅವರು ಸಂಚರಿಸುವ ರಸ್ತೆಗಳು, ಮೆಟ್ರೋ ರೈಲು, ನಿಲ್ದಾಣಗಳು ಹಾಗೂ ವೇದಿಕೆ ಕಾರ್ಯಕ್ರಮದ ಸ್ಥಳಗಳನ್ನು ಪರಿಶೀಲನೆ ನಡೆಸಿದೆ.
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚಿಸಲಾಗಿದ್ದು, ಮಾರ್ಗದಲ್ಲಿರುವ ಬೃಹತ್ ಕಟ್ಟಡಗಳ ಮೇಲೆಯೂ ಭದ್ರತಾ ಸಿಬ್ಬಂದಿ ನಿಗಾ ವಹಿಸಲಿದ್ದಾರೆ. ಹೈ ರಿಸ್ಕ್ ಅಪಾರ್ಟ್‌ಮೆಂಟ್‌ಗಳಿಗೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬೆಳಗ್ಗೆ 10.05ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಗ್ಗೆ 10.45ಕ್ಕೆ ಪ್ರಶಾಂತಿ ಕುಟೀರಂನಲ್ಲಿ ನಡೆಯುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಮಧ್ಯಾಹ್ನ 12.40ಕ್ಕೆ ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಲಿದ್ದು, 12.45ಕ್ಕೆ ನಮ್ಮ ಮೆಟ್ರೋ ಪಿಂಕ್ ಲೈನ್ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಮಧ್ಯಾಹ್ನ 12.50ಕ್ಕೆ ತಾವರೆಕೆರೆಯಿಂದ ಐಐಎಂಬಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.
ಮಧ್ಯಾಹ್ನ 1.15ಕ್ಕೆ ಐಐಎಂಬಿ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಲ್ಲಿ ಬೆಂಗಳೂರು (ಯಶವಂತಪುರ)-ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಪ್ರಯಾಣಿಸಲಿದ್ದು, 3.30ಕ್ಕೆ ಮೈಸೂರಿನ ಕೆ.ಸಿ. ಲೇಔಟ್ ಪಾರ್ಕ್‌ನಲ್ಲಿ ನಡೆಯುವ 'ಭಾರತ್ ವ್ಯಾನ್' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಮೈಸೂರು ಕಾಸ್ಮಾಸ್/ಪ್ಲಾನೆಟೋರಿಯಂ ಉದ್ಘಾಟಿಸಲಿದ್ದಾರೆ. ಬಳಿಕ ಸಂಜೆ 6.05ಕ್ಕೆ ಮೈಸೂರಿನಿಂದ ನೇರವಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.


