ರಾಯಚೂರು : ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಖಂಡಿಸಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕಾರ್ಯಕರ್ತರು ಖರ್ಗೆ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಟೈರ್ ಗೆ ಬೆಂಕಿ ಹಚ್ಚಿ, ಖರ್ಗೆ ಅವರ ಪ್ರತಿಕೃತಿಯನ್ನು ದಹಿಸಿ ತಮ್ಮ ವಿರೋಧವನ್ನು ತೀವ್ರವಾಗಿ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಶಾಸಕ ಡಾ. ಶಿವರಾಜ್ ಪಾಟೀಲ್, ತಮಿಳುನಾಡಿನಲ್ಲಿ ನಡೆದ ಚುನಾವಣಾ ಪ್ರಚಾರದ ಕೊನೆಯ ದಿನ ಚೆನ್ನೈನಲ್ಲಿ ಸುದ್ದಿಗೋಷ್ಠಿಯಲ್ಲಿ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಉಲ್ಲೇಖಿಸಿರುವುದಾಗಿ ಆರೋಪಿಸಿದರು. ಇಂತಹ ಹೇಳಿಕೆಗಳು ದೇಶದ ರಾಜಕೀಯ ಸಂಸ್ಕೃತಿಗೆ ಧಕ್ಕೆಯುಂಟುಮಾಡುವಂತವು ಎಂದು ಅವರು ಹೇಳಿದರು.
ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ವಿಚಾರದಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟನ್ನು ಪ್ರಶ್ನಿಸಿದ ಖರ್ಗೆ, ಬಿಜೆಪಿ ಬೆಂಬಲಿಸಿದ್ದಕ್ಕಾಗಿ ಎಐಎಡಿಎಂಕೆ ಪಕ್ಷವನ್ನು ಟೀಕಿಸಿ, ಪ್ರಧಾನಿ ಮೋದಿಯವರ ವಿರುದ್ಧ ಅಸಂಬದ್ಧ ಆರೋಪಗಳನ್ನು ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
“ಪ್ರಧಾನಿ ಮೋದಿ ದೇಶದ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಅವರ ವಿರುದ್ಧ ಇಂತಹ ಅವಹೇಳನಕಾರಿ ಪದಗಳನ್ನು ಬಳಸುವುದು ಕಾಂಗ್ರೆಸ್ ಪಕ್ಷದ ನಿಜಸ್ವಭಾವವನ್ನು ತೋರಿಸುತ್ತದೆ,” ಎಂದು ಶಾಸಕರು ಕಿಡಿಕಾರಿದರು.
ಖರ್ಗೆ ಅವರು ಇಡಿ, ಐಟಿ, ಸಿಬಿಐ ಸಂಸ್ಥೆಗಳ ದುರುಪಯೋಗ ಕುರಿತು ಮಾಡಿದ ಆರೋಪಗಳನ್ನೂ ತಳ್ಳಿ ಹಾಕಿದ ಅವರು, ಇದು ರಾಜಕೀಯ ಲಾಭಕ್ಕಾಗಿ ಮಾಡಲಾಗುತ್ತಿರುವ ತಪ್ಪು ಪ್ರಚಾರ ಎಂದು ಹೇಳಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ಈ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿಗಾರರು ಗಾರಲದಿನ್ನಿ ವೀರನಗೌಡ

