ನಿಡಗುಂದಿ: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ₹15 ಸಾವಿರಕ್ಕೆ ಹೆಚ್ಚಿಸಬೇಕು ಹಾಗೂ ಆರೋಗ್ಯ ಭಾಗ್ಯ ಯೋಜನೆಯ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ನಿಡಗುಂದಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘದ ಮುಖಂಡರು ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ಆಶಾ ಕಾರ್ಯಕರ್ತೆಯರು ಕಳೆದ ಒಂಬತ್ತು ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಬೆಂಬಲವಾಗಿ ನಿಡಗುಂದಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಶಿವಯ್ಯ ಹಿರೇಮಠ್ ಹಾಗೂ ಆನಂದ ಹಡಗಲಿ ಮಾತನಾಡಿದರು. ಈ ಹಿಂದೆ ನಡೆದ ಹೋರಾಟದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವಧನ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದರು. ಆದರೆ, ಒಂಬತ್ತು ತಿಂಗಳು ಕಳೆದರೂ ಈ ಘೋಷಣೆ ಇನ್ನೂ ಜಾರಿಯಾಗಿಲ್ಲ ಎಂದು ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮೀಣ ಭಾಗದ ಬಡಜನರಿಗೆ ಆರೋಗ್ಯ ಸೇವೆ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹಗಲಿರುಳು ಶ್ರಮಿಸುವ ಕಾರ್ಯಕರ್ತೆಯರಿಗೆ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ ನೀಡಬೇಕು. ಜೊತೆಗೆ ಆರೋಗ್ಯ ಭಾಗ್ಯ ಯೋಜನೆಯ ಸೌಲಭ್ಯವನ್ನೂ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ ಹಾಗೂ ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದ ಗೌರವಧನದ ಜೊತೆಗೆ ಕೇಂದ್ರದ ಪ್ರೋತ್ಸಾಹಧನ ಸೇರಿ ₹16 ಸಾವಿರದವರೆಗೆ ನೀಡಲಾಗುತ್ತಿದೆ. ಆದರೆ ಕರ್ನಾಟಕದ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಗೌರವಧನ ಸಿಗುತ್ತಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ರೇಣುಕಾ ಕಂಬಾರ, ಶಿಲ್ಪಾ ಹೊಸಮನಿ, ಮಾಲಾ ತಿಮಾಪುರ, ಶೋಭಾ ಸುರಪುರ, ಸುಜಾತ ಅಂಗಡಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ರೈತ ಸಂಘದ ಅಧ್ಯಕ್ಷ ಸೀತಪ್ಪ ಗಣಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಆನಂದ ಹಡಗಲಿ, ರಾಜು ಚಳ್ ಮರದ, ಆನಂದ ಬೋವಿವಡ್ಡರ್, ಸಂತೋಷ್ ಕಡಿ ಸೇರಿದಂತೆ ಹಲವರು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ವರದಿ :ಅಲಿ ಮಕಾನದಾರ


