ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿ ನಡೆದ ಅಕ್ರಮ ಕಲ್ಲು ಗಣಿಗಾರಿಕೆ ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ.
ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಈ ಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದ ಬಂಡೆ ಸ್ಫೋಟದಲ್ಲಿ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದು, ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಿಹಾರ ಮೂಲದ 8 ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಮುಂಜಾನೆ ಸಂಭವಿಸಿದ ಭೀಕರ ಸ್ಫೋಟ
ಪ್ರಾಥಮಿಕ ಮಾಹಿತಿಯ ಪ್ರಕಾರ, ಚಿಕ್ಕನಹಳ್ಳಿ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ಅನುಮತಿ ಇಲ್ಲದೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿತ್ತು.
ಇಂದು ಬೆಳಗಿನ ಜಾವ ಕಾರ್ಮಿಕರು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ, ಬಂಡೆ ಒಡೆಯಲು ಬಳಸಿದ ಜಿಲೆಟಿನ್ ಸ್ಫೋಟಕಗಳಿಂದ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಬೃಹತ್ ಬಂಡೆಗಳು ಕಾರ್ಮಿಕರ ಮೇಲೆ ಉರುಳಿ ಬಿದ್ದಿದ್ದು, ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಸುಮಾರು 15-16 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ, ಹಲವರು ಬಂಡೆಯಡಿ ಸಿಲುಕಿರುವ ಶಂಕೆ ಕೂಡ ವ್ಯಕ್ತವಾಗಿದೆ.


