ಮೂಡಲಗಿ : ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಬಲ ಸೂಚಿಸುವ ಉದ್ದೇಶದಿಂದ ನಾಳೆ ಕರ್ನಾಟಕದ ಪ್ರತಿಯೊಂದು ಹಳ್ಳಿ, ಪಟ್ಟಣ ಹಾಗೂ ನಗರಗಳಲ್ಲಿ ಸ್ವಯಂಪ್ರೇರಿತವಾಗಿ ರಾಜ್ಯಾದ್ಯಂತ ಕರ್ನಾಟಕ ಬಂದ್ ಆಚರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಕರೆ ನೀಡಿದರು.
ಶುಕ್ರವಾರ ಸಂಜೆ ಗುರ್ಲಾಪೂರ ಕ್ರಾಸ್‌ನಲ್ಲಿ ನಡೆಯುತ್ತಿರುವ ರೈತರ ಹೋರಾಟದ ವೇದಿಕೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾಧಿಕಾರಿಗಳು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಜಿಲ್ಲೆಯ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆ, ವಾಹನ ಸಂಚಾರಕ್ಕೆ ಅಡಚಣೆ ಹಾಗೂ ಟೋಲ್ ಪ್ಲಾಜಾಗಳ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವ ಚಟುವಟಿಕೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ರೈತರು ಶಾಂತಿಯುತವಾಗಿ ತಮ್ಮ ಪ್ರತಿಭಟನೆಯನ್ನು ಮುಂದುವರಿಸಬೇಕು ಎಂದರು.
ನಾಳೆ ರಾಜ್ಯದ ರೈತರು ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ಸೂಚಿಸಬೇಕು.
ಚಿತ್ರರಂಗದ ನಟ-ನಟಿಯರು ಕೂಡ ರೈತರ ಹೋರಾಟದಲ್ಲಿ ಭಾಗವಹಿಸಿ ಅನ್ನದಾತರ ನ್ಯಾಯಯುತ ಹೋರಾಟಕ್ಕೆ ಬೆಂಬಲ ನೀಡಬೇಕು. ಒಂದು ವೇಳೆ ಚಿತ್ರರಂಗದವರು ರೈತರ ಹೋರಾಟಕ್ಕೆ ಬೆಂಬಲ ಸೂಚಿಸದಿದ್ದರೆ, ರೈತರು ಯಾವುದೇ ಕಾರಣಕ್ಕೂ ಚಲನಚಿತ್ರಗಳನ್ನು ವೀಕ್ಷಿಸಲು ಚಿತ್ರಮಂದಿರಗಳಿಗೆ ಹೋಗಬಾರದು ಎಂದು ಕರೆ ನೀಡಿದರು.


