ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಷಯ ಶಿಕ್ಷಕರ ಕೊರತೆ ನೀಗಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
2026-27ನೇ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 11,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಆಗಸ್ಟ್ 7, 2026ರಂದು ಈ ಕುರಿತು ಆದೇಶ ಹೊರಡಿಸಲಾಗಿದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
9,730 ಹುದ್ದೆಗಳಿಗೆ ಹೆಚ್ಚುವರಿಯಾಗಿ 1,270
ಈ ಹಿಂದೆ 2026-27ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ 9,730 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಲು ಅನುಮೋದನೆ ನೀಡಲಾಗಿತ್ತು.
ಆದರೆ, ತಾಲೂಕು ಮತ್ತು ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದ್ದ ಹುದ್ದೆಗಳಲ್ಲಿ ಕೆಲವು ಕಡೆ ಶಿಕ್ಷಕರ ಕೊರತೆ ಮುಂದುವರಿದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 1,270 ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಒಟ್ಟು 11,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.


