ಕೊಪ್ಪಳ : ಸಾರ್ವಜನಿಕ ಬಸ್ಗಳಲ್ಲಿ ಶಾಲಾ ಮಕ್ಕಳಿಗೆ ಆಗುತ್ತಿರುವ ಸಮಯದ ವ್ಯತ್ಯಯವನ್ನು ತಪ್ಪಿಸಲು ಮುಂದಿನ ಜೂನ್ ತಿಂಗಳಿನಿಂದ ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ವಿದ್ಯಾರ್ಥಿಗಳಿಗಾಗಿಯೇ ಸರ್ಕಾರದಿಂದ ಪ್ರತ್ಯೇಕ ಉಚಿತ ಬಸ್ ಸೌಲಭ್ಯ ಒದಗಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಒಂದೇ ಸೂರಿನಡಿ 14 ವರ್ಷಗಳ ಸಮಗ್ರ ಕಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಇದರ ಜೊತೆಗೆ, ಮುಂದಿನ ಶೈಕ್ಷಣಿಕ ವರ್ಷದಿಂದ 1ರಿಂದ 12ನೇ ತರಗತಿಯವರೆಗಿನ ಎಲ್ಲಾ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಿಸಲಾಗುವುದು ಹಾಗೂ ಪಠ್ಯಪುಸ್ತಕಗಳ ಭಾಗ-1 ಮತ್ತು ಭಾಗ-2ನ್ನು ಒಟ್ಟಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.


