ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 9 ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಜೆವಾರ್ ವಿಮಾನ ನಿಲ್ದಾಣದ ಸಮೀಪದ ದಯಾನತ್‌ಪುರ ಗ್ರಾಮದ ಬಳಿ ಎಕ್ಸ್‌ಪ್ರೆಸ್‌ವೇಯಲ್ಲಿ ಈ ದುರ್ಘಟನೆ ನಡೆದಿದೆ.
ದೆಹಲಿ/ಗ್ರೇಟರ್ ನೋಯ್ಡಾ ಭಾಗದಿಂದ ಆಗ್ರಾ ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ನಲ್ಲಿ ತಡರಾತ್ರಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.
ಪ್ರಯಾಣಿಕರು ನಿದ್ದೆಯಲ್ಲಿದ್ದ ಸಂದರ್ಭದಲ್ಲೇ ಬಸ್‌ನೊಳಗೆ ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಗಳು ವ್ಯಾಪಿಸಿವೆ.
ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ ಚಾಲಕ ತಕ್ಷಣವೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾನೆ. ಆದರೂ ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ.


