ಬೆಂಗಳೂರು:ವಿಶ್ವಗುರು ಬಸವಣ್ಣ ಹಾಗೂ ಲಿಂಗಾಯತ ಸಮುದಾಯದ ಕುರಿತು ಅವಹೇಳನಕಾರಿಯಾಗಿ ಬರೆದಿರುವ ಆರೋಪದ ಮೇಲೆ ವ್ಯಾಪಕ ವಿರೋಧಕ್ಕೆ ಗುರಿಯಾಗಿರುವ ಲೇಖಕ ರವಿ ಹಂಜಗಿಮಠ್ (ರವಿ ಹಂಜ್) ಅವರ 'ಬಸವ ಮಂಟಪ' ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
ವೀರಶೈವ ಲಿಂಗಾಯತರು ಮತ್ತು ಬಸವಣ್ಣನವರ ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದೂರು ದಾಖಲಾದ ಬೆನ್ನಲ್ಲೇ, ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಪುಸ್ತಕವನ್ನು ಮುಟ್ಟುಗೋಲು ಹಾಕಿ ಲೇಖಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಸರ್ಕಾರ ಇಂದು ಅಧಿಕೃತ ಆದೇಶ ಪ್ರಕಟಿಸಿದೆ.
ಇನ್ನೊಂದೆಡೆ, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಸಂಬಂಧ ಬಂಧನದಿಂದ ರಕ್ಷಣೆ ಪಡೆಯಲು ರವಿ ಹಂಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 56ನೇ ಸಿಸಿಹೆಚ್ ನ್ಯಾಯಾಲಯವು ಆದೇಶವನ್ನು ನಾಳೆಗೆ (ನವೆಂಬರ್ 25) ಕಾಯ್ದಿರಿಸಿದೆ. ವಿಚಾರಣೆ ವೇಳೆ, ಯಾರು ಯಾರ ಬಗ್ಗೆ ಹೇಗಾದರೂ ಪುಸ್ತಕ ಬರೆಯಬಹುದೇ ಮತ್ತು ಬೇರೆಯವರ ಭಾವನೆಗೆ ಧಕ್ಕೆ ಉಂಟುಮಾಡಬಹುದೇ ಎಂದು ನ್ಯಾಯಾಧೀಶ ಮೋಹನ್ ಪ್ರಭು ಅವರು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ರವಿ ಹಂಜ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್, ಕಳೆದ ಎರಡು ವರ್ಷಗಳಿಂದ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದ ಲೇಖನಗಳಿಗೆ ಯಾರೂ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ, ಆದರೆ ಅವುಗಳನ್ನು ಪುಸ್ತಕವಾಗಿ ಪ್ರಕಟಿಸಿದಾಗ ದೂರು ನೀಡಲಾಗಿದೆ ಮತ್ತು ರಾಜಕಾರಣಿಗಳ ಒತ್ತಡದಿಂದ ಪೊಲೀಸರು ಪ್ರಾಥಮಿಕ ತನಿಖೆಯನ್ನೇ ನಡೆಸದೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಾದ ಮಂಡಿಸಿದರು. ಬಳಿಕ ನ್ಯಾಯಾಧೀಶರು ಜಾಮೀನು ಆದೇಶವನ್ನು ಬುಧವಾರಕ್ಕೆ ಕಾಯ್ದಿರಿಸಿದರು.


