ಕಲಬುರಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಂತ್ರಿ ಸ್ಥಾನ ಸಿಗದಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್, ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ಆದರೆ, ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳನ್ನು ತೀವ್ರವಾಗಿ ನಿರಾಕರಿಸಿರುವ ಅವರು, ಇವೆಲ್ಲವೂ ಬರಿ ಸುಳ್ಳು ವದಂತಿಗಳು ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ತಮ್ಮ ರಾಜಕೀಯ ಜೀವನದ ಸಿದ್ಧಾಂತ ಮತ್ತು ಮುಂದಿನ ನಡೆ ಕುರಿತು ಸಾರ್ವಜನಿಕವಾಗಿ ವಿವರಣೆ ನೀಡಿದ್ದಾರೆ.
ಸಚಿವ ಸ್ಥಾನ ಸಿಗದಿದ್ದಕ್ಕೆ ನೋವಿದ್ದರೂ ನಿಷ್ಠೆ ಅಚಲ
ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಸಹಜವಾಗಿಯೇ ತಮಗೂ ಮನಸ್ಸಿಗೆ ನೋವಾಗಿದೆ ಎಂಬುದನ್ನು ಒಪ್ಪಿಕೊಂಡಿರುವ ಬಿ.ಆರ್. ಪಾಟೀಲ್, ತಮ್ಮ ಐದು ದಶಕಗಳ ಸುದೀರ್ಘ ರಾಜಕೀಯ ಪಯಣದಲ್ಲಿ ಅಧಿಕಾರ, ವ್ಯಕ್ತಿ ಹಾಗೂ ವೈಯಕ್ತಿಕ ಹಿತಾಸಕ್ತಿಗಿಂತ ಪಕ್ಷದ ಸಿದ್ಧಾಂತವೇ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ. ಎಷ್ಟೇ ಸವಾಲುಗಳು ಎದುರಾದರೂ ಕಾಂಗ್ರೆಸ್ ಪಕ್ಷದ ಮೇಲಿನ ತಮ್ಮ ನಿಷ್ಠೆ ಎಂದಿಗೂ ಅಚಲವಾಗಿರುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.


