ಬೆಂಗಳೂರು: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಿಸಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟದಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಪರಿಗಣಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಹುಬ್ಬಳ್ಳಿಯ ಮಯೂರಿ ಎಸ್ಟೇಟ್ ನಿವಾಸಿ ಸಂಗಮನಾಥ ಅಂಜಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಿದ ನ್ಯಾಯಪೀಠ, ಪ್ರತಿಭಟನೆಯ ನೆಪದಲ್ಲಿ ಟ್ರಾಫಿಕ್ ಬ್ಲಾಕ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ತಡೆಯಬೇಕು ಹಾಗೂ ಸ್ಥಳೀಯರ ಜೀವ, ಆಸ್ತಿ-ಪಾಸ್ತಿಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ತಕ್ಷಣವೇ ಸೂಕ್ತ ರಕ್ಷಣೆ ಒದಗಿಸಬೇಕೆಂದು ಹುಬ್ಬಳ್ಳಿ ಪೊಲೀಸ್ ಆಯುಕ್ತರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪಿ.ಪಿ. ಹೆಗಡೆ ಅವರು, ಕಬ್ಬು ಬೆಳೆಗಾರರ ಸುದೀರ್ಘ ಪ್ರತಿಭಟನೆಯಿಂದ ಹುಬ್ಬಳ್ಳಿಯ ಮಯೂರಿ ಎಸ್ಟೇಟ್ ಹಾಗೂ ಸುತ್ತಮುತ್ತಲಿನ ನಿವಾಸಿಗಳ ದಿನನಿತ್ಯದ ಓಡಾಟಕ್ಕೆ ಭಾರಿ ಅಡಚಣೆಯಾಗುತ್ತಿದೆ ಎಂದು ಪೀಠದ ಗಮನಕ್ಕೆ ತಂದರು.
ಇದಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರದ ಪರ ವಕೀಲರು, ಧರಣಿ ಅಥವಾ ಹೋರಾಟಗಳಿಂದ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ಗೆ ಭರವಸೆ ನೀಡಿದರು.
ನಿವಾಸಿಗಳ ಮನವಿ ಮತ್ತು ಕುಂದುಕೊರತೆಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ, ತಕ್ಷಣವೇ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಪೀಠವು ಸೂಚಿಸಿದೆ.


