ಮಾನ್ವಿ: ತಾಲೂಕಿನಲ್ಲಿ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗ್ರಾಮ ಪಂಚಾಯಿತಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಹಾಗೂ ಸಿಬ್ಬಂದಿಗಳೊಂದಿಗೆ ನಡೆದ ಕುಡಿಯುವ ನೀರು ಮತ್ತು ಮೂಲಸೌಲಭ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮಾನ್ವಿ ತಾಲೂಕನ್ನು ಸರ್ಕಾರ ಬರಪೀಡಿತ ತಾಲೂಕು ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಗುರುತಿಸಿ, ಮುಂದಿನ ಏಳು ತಿಂಗಳು ಹಾಗೂ ಬೇಸಿಗೆ ಅವಧಿಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ ಮಾಡಬೇಕು. ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾದರೆ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಹಾಗೂ ಶಾಸಕರ ಗಮನಕ್ಕೆ ತಂದು ಅಗತ್ಯ ಪರಿಹಾರ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ತಾಲೂಕಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸರ್ಕಾರದಿಂದ ಹೊಸದಾಗಿ 39 ಕೊಳವೆಬಾವಿ ಕೊರೆಸಲು ಅನುಮೋದನೆ ದೊರೆತಿದ್ದು, ಅಗತ್ಯವಿದ್ದಲ್ಲಿ ಇನ್ನಷ್ಟು ಕೊಳವೆಬಾವಿಗಳಿಗೆ ಮಂಜೂರಾತಿ ಪಡೆಯಲಾಗುವುದು ಎಂದು ಹೇಳಿದರು. ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಕುಡಿಯುವ ನೀರಿನ ಪೂರೈಕೆಯ ಕುರಿತು ಪ್ರತಿದಿನ ಮಾಹಿತಿ ಸಂಗ್ರಹಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲಿದ್ ಅಹ್ಮದ್ ಅವರಿಗೆ ಸೂಚನೆ ನೀಡಿದರು.
ಶಾಸಕ ಜಿ ಹಂಪಯ್ಯ ನಾಯಕ ಸಾಹುಕಾರ ವಿವಿಧ ಗ್ರಾಮ ಪಂಚಾಯಿತಿಗ ಪಿಡಿಒಗಳಿಂದ ಕುಡಿಯುವ ನೀರಿನ ನಿರ್ವಹಣೆ ಕುರಿತು ಮಾಹಿತಿ ಪಡೆದು ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಪಂಚ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬಿ.ಕೆ. ಅಮರೇಶಪ್ಪ ವಕೀಲರು ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ :ಆಂಜನೇಯ ನಸಲಾಪುರ


