ಬೀದರ್: ಕೂಲಿ ಕೆಲಸಕ್ಕೆ ಹೋಗಿದ್ದ 7 ಜನ ಭೀಮನ ಅಮಾವಾಸ್ಯೆ ಹಿಂದಿನ ದಿನ ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ.
ಬೀದರ್ ಮೂಲದ 7 ಜನ ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೆಲಂಗಾಣದಲ್ಲಿ ಟ್ಯಾಂಕರ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕೂಲಿ ಕೆಲಸಕ್ಕೆ ಹೋಗಿದ್ದ ಆರು ಕಾರ್ಮಿಕರು ಮತ್ತು ಆಟೋ ಚಾಲಕ ಸಾವನ್ನಪ್ಪಿದ್ದಾರೆ.7 ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀದೇವಿ, ರೇಖಾ, ಕವಿತಾ, ರೇಷ್ಮಾ, ಆಟೋ ಚಾಲಕ ದೇವದಾಸ್, ನಿಖಿತಾ ಸೇರಿ 7 ಜನ ಮೃತಪಟ್ಟಿದ್ದಾರೆ. ತೆಲಂಗಾಣದ ಜಾಹಿರಾಬಾದ್ ಬಳಿ ಹೈದರಾಬಾದ್- ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಮೆದಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಮೃತರ ಆತ್ಮಹತ್ಯೆ ಶಾಂತಿ ಕೋರಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ, ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸುವಂತೆ ತೆಲಂಗಾಣದ ಆಡಳಿತದೊಂದಿಗೆ ಸತತ ಸಂಪರ್ಕದಲ್ಲಿರಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದಾರೆ. ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ವೆಚ್ಚವನ್ನು ಭರಿಸುವಂತೆ ಬೀದರ್ ಜಿಲ್ಲಾ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.


