ಬೆಳಗಾವಿ: ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮಗು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಮಾಲದಿನ್ನಿ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಓಂಕಾರ ಮಾಂಡ್ರಿ (26), ರೇಷ್ಮಾ ಮಾಂಡ್ರಿ (32) ಹಾಗೂ ನಾಲ್ಕು ವರ್ಷದ ಬಾಲಕ ದೇವಾಂಶ್ (4) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಶ್ರೀಕಾಂತ್, ವಂದನಾ ಮತ್ತು ಹರ್ಷದ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ವಿವರ:
ಮೃತರು ಮತ್ತು ಗಾಯಾಳುಗಳು ಕಾರಿನಲ್ಲಿ ಮಹಾರಾಷ್ಟ್ರದ ಪುಣೆಯಿಂದ ಸವದತ್ತಿ ಕಡೆಗೆ ಪ್ರಯಾಣಿಸುತ್ತಿದ್ದರು.
ಈ ವೇಳೆ ಸವದತ್ತಿಯಿಂದ ಗೋಕಾಕ್ ಕಡೆಗೆ ವೇಗವಾಗಿ ಬರುತ್ತಿದ್ದ ಲಾರಿ, ಮಾಲದಿನ್ನಿ ಕ್ರಾಸ್ ಬಳಿ ಕಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.


