ಬೋಪಾಲ್ : ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಸುಮಾರು 30 ಅಡಿ ಎತ್ತರದ ಸೇತುವೆಗೆ ಡಿಕ್ಕಿ ಹೊಡೆದು ಉರುಳಿದ ಪರಿಣಾಮ ಬೆಂಗಳೂರು ಪೊಲೀಸ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಬಿಯೋರಾ ನಗರದಲ್ಲಿ ಸಂಭವಿಸಿದೆ.
ಅಫಘಾತದಲ್ಲಿ 11 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಸೈಬರ್ ಕ್ರೈಂ ತಂಡದ ಇನ್‌ಸ್ಪೆಕ್ಟರ್ ರವಿ ಕೆ.ವಿ. ಸೇರಿ ಬಸ್ ಚಾಲಕ ವಿಕಾಸ್ ಶುಕ್ಲಾ, ಬೆಲಾಲ್ ಅಲಿ ಹಾಗೂ ಜ್ಯೋತಿರಾದಿತ್ಯ ಸಿಂಗ್ ಗೌಡ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಸೈಬರ್ ಕ್ರೈಂ ತಂಡದ ಇತರ ಮೂವರು ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ಸಬ್‌ಇನ್‌ಸ್ಪೆಕ್ಟರ್ ರಮೇಶ್ ನಾಯಕ್, ಎಎಸ್‌ಐ ಶ್ರೀನಿವಾಸ್ ಹಾಗೂ ತಾಂತ್ರಿಕ ಸಿಬ್ಬಂದಿ ವಿಶ್ವನಾಥ್ಗೆ ಪೆಟ್ಟಾಗಿದ್ದು, ಈ ಪೈಕಿ ಶ್ರೀನಿವಾಸ್ ಅವರ ಸ್ಥಿತಿ ಗಂಭೀರವಾಗಿದೆ.
ಬಸ್ ಬೆಂಗಳೂರಿನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಆರೋಪಿಯೊಬ್ಬನನ್ನು ಹುಡುಕಿಕೊಂಡು ಬೆಂಗಳೂರಿನ ಸೈಬರ್ ಕ್ರೈಂ ತಂಡ ಮಧ್ಯಪ್ರದೇಶಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.
ಪೊಲೀಸರ ಪ್ರಕಾರ, ಬಸ್ ನಿಯಂತ್ರಣ ತಪ್ಪಿ ಭೋಪಾಲ್ ಬೈಪಾಸ್‌ನ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಸುಮಾರು ನಾಲ್ವರು ಪ್ರಯಾಣಿಕರು ಹೊರಕ್ಕೆ ಎಸೆಯಲ್ಪಟ್ಟು, 30 ಅಡಿ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ.


