ಬೆಂಗಳೂರು : ತುರ್ತು ವಿಚಾರಣೆಗೆ ಕೋರಿದ್ದ 240ಕ್ಕೂ ಹೆಚ್ಚು ಅರ್ಜಿಗಳನ್ನು ಬುಧವಾರ ವಿಚಾರಣೆ ನಡೆಸುವ ಮೂಲಕ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಇದೇ ಮೊದಲ ಬಾರಿಗೆ ಹೈಕೋರ್ಟ್ ಕಲಾಪಗಳ ಇತಿಹಾಸದಲ್ಲೇ ಹೊಸ ದಾಖಲೆ ಬರೆದರು.
ಬೆಳಿಗ್ಗೆ ಎಂದಿನ ಕಲಾಪದಲ್ಲಿ ತುರ್ತು ವಿಚಾರಣೆಗೆ ಕೋರಲಾದ 240ಕ್ಕೂ ಹೆಚ್ಚು ಮೆಮೊ ಸ್ವೀಕರಿಸಿ ಅವುಗಳನ್ನು ಮಧ್ಯಾಹ್ನದ ಕಲಾಪ ಪಟ್ಟಿಗೆ ಅಣಿಗೊಳಿಸುವಂತೆ ಆದೇಶಿಸಿದರು.
ಬೆಳಗಿನ ಕಲಾಪದಲ್ಲಿ ಎಂದಿನಂತೆ ನಿಗದಿಯಾಗಿದ್ದ 318 ಅರ್ಜಿಗಳ ವಿಚಾರಣೆ ಪೂರೈಸಿದರು. ಭೋಜನ ಸಮಯದ ನಂತರ 2.30ಕ್ಕೆ ಆರಂಭಿಸಿದ ಕಲಾಪವನ್ನು ರಾತ್ರಿ 8.07ಕ್ಕೆ ಮುಕ್ತಾಯ ಗೊಳಿಸಿದರು.
ಒಂದು ದಿನದ ಕಲಾಪದ ಅವಧಿಯಲ್ಲಿ ಒಟ್ಟು 534 ರಿಟ್ ಮತ್ತು ಕ್ರಿಮಿನಲ್ ಅರ್ಜಿಗಳ ವಿಚಾರಣೆ ಪೂರೈಸಿ ಅವುಗಳಲ್ಲಿ ಒಟ್ಟು 85 ಅರ್ಜಿಗಳನ್ನು ವಿಲೇವಾರಿ ಮಾಡಿದರು.


