ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅನುದಾನ ಬಿಡುಗಡೆಯಲ್ಲಿ ಯಾವುದೇ ರೀತಿಯ ಉದ್ದೇಶಪೂರ್ವಕ ತಾರತಮ್ಯ ಎಸಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಇಲಾಖೆಗೆ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿದ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ ಆ ಸಮುದಾಯಕ್ಕೆ ಹೆಚ್ಚು ಅನುದಾನ ಸಂದಾಯವಾಗಿದೆಯೇ ಹೊರತು, ಇದರ ಹಿಂದೆ ಯಾವುದೇ ಪಕ್ಷಪಾತ ನಡೆದಿಲ್ಲ ಎಂದು ಅವರು ಹೇಳಿದ್ದಾರೆ.
ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳು ನೀಡಿರುವ ಮನವಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದೆ.
ಸದ್ಯ ಸುಮಾರು 155 ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳಿಗೆ ಒಟ್ಟು 71.85 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಪೂರ್ವಭಾವಿ ಮಂಜೂರಾತಿಯನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

