ಬೆಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಸಚಿವ ಸಂಪುಟ ಸಭೆ ನಡೆದಿದ್ದು, ಕರಾವಳಿ ಅಭಿವೃದ್ಧಿಗೆ ಸಂಬಂಧಿಸಿದಂತೆ 40 ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ 'ಪ್ರಜಾಸೌಧ'ದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಿತು.
ಸಂಪುಟ ಸಭೆ ಬಳಿಕ ಸಿದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ತುಳು ಭಾಷೇಗೆ ಮಾನ್ಯತೆ ನೀಡಬೇಕು ಎಂಬುದು ಈ ಭಾಗದ ಜನರ ಹಲವು ವರ್ಷಗಳ ಬೇಡಿಕೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಬಗ್ಗೆ ಯಾಕೆ ನಿರ್ಧಾರ ಕೈಗೊಂಡಿಲ್ಲ ಎಂಬುದನ್ನು ನಾವು ಚರ್ಚಿಸಲು ಹೋಗಲ್ಲ. ನಮ್ಮ ಸರ್ಕಾರದಲ್ಲಿ ತುಳು ಭಾಷೆಗೆ ಮಾನ್ಯತೆ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.
ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆ ಎಂದು ಘೋಷಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅನ್ವಯವಾಗುವಂತೆ ತುಳುವನ್ನು ಎರಡನೇ ಹೆಚ್ಚುವರಿ ಭಾಷೆ ಎಂದು ಪರಿಗಣಿಸಲಾಗುವುದು ಎಂದರು.
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಕರೆಯಬೇಕೆಂದು ಚರ್ಚಿಸಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಘೋಷಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ದಕ್ಷಿಣ ಕನ್ನಡ ಎಂದು ಈ ಹಿಂದೆ ಯಾವಾಗ, ಹೇಗೆ ಬಂತು ಎಂದು ಚರ್ಚಿಸಲ್ಲ. ಒಂದು ತಿಂಗಳ ಒಳಗಾಗಿ ಮಂಗಳೂರು ಎಂದು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.


