ಮೈಸೂರು: ಲಂಚ ಸ್ವೀಕರಿಸುತ್ತಿದ್ದ (Bribe) ವೇಳೆ ಇಬ್ಬರು ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಲೋಕಾಯುಕ್ತ (Lokayukta Raid) ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದೇವರಾಜಯ್ಯ ಅವರು ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಇದೇ ವೇಳೆ ನಂಜನಗೂಡು ಗ್ರಾಮೀಣ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್ ಅವರು ₹5 ಸಾವಿರ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕುಸುಮ್ ಸೌರ ಪಂಪ್‌ಸೆಟ್ ಯೋಜನೆಯಡಿ ಕೆಲಸ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚದ ಬೇಡಿಕೆ ಇಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಗುತ್ತಿಗೆದಾರ ನಂಜರಾಜು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.
ಇಬ್ಬರೂ ತಮ್ಮ ಕಚೇರಿಯಲ್ಲೇ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳಿಕ ಕಚೇರಿಯಲ್ಲಿದ್ದ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿ, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಉದೇೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇಬ್ಬರು ಅಧಿಕಾರಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.


