ಬೆಂಗಳೂರು: ಮಹಿಳೆಯರ ಖಾಸಗಿ ಪಿಜಿಗಳಿಗೆ ನುಗ್ಗಿ ಅಸಭ್ಯವಾಗಿ ವರ್ತಿಸುವುದು, ಯುವತಿಯರ ಮೇಲೆ ದೌರ್ಜನ್ಯ ಎಸಗಲು ಯತ್ನಿಸುವ ಆರೋಪ ಎದುರಿಸುತ್ತಿದ್ದ ವಿಕೃತ ಕಾಮಿಯನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧನದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ಆರೋಪಿಯ ಕಾಲಿಗೆ ಗುಂಡೇಟು ಬಿದ್ದಿದೆ.
ಬೆಂಗಳೂರು ಉತ್ತರ ತಾಲೂಕಿನ ತರಹುಣಸೆಯ ಟೆರ್ರಾಫಾರಂ ಬಳಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ ನಿವಾಸಿ ಬೆಟ್ಟ ನರೇಶ್ ಬಂಧಿತ ಆರೋಪಿ. ಈತನ ವಿರುದ್ಧ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತನೆ ಹಾಗೂ ಅತ್ಯಾಚಾರ ಯತ್ನ ಸೇರಿದಂತೆ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.
ಆರೋಪಿ ಬೆಟ್ಟ ನರೇಶ್ ಮಹಿಳೆಯರು ವಾಸಿಸುವ ಪಿಜಿಗಳಿಗೆ ನುಗ್ಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ನವೆಂಬರ್ 27ರಂದು ಚಿಕ್ಕಜಾಲ ಮತ್ತು ಯಲಹಂಕದಲ್ಲಿರುವ ಎರಡು ಖಾಸಗಿ ಮಹಿಳಾ ಪಿಜಿಗಳಿಗೆ ನುಗ್ಗಿದ್ದಾನೆ.
ಈ ವೇಳೆ ಯುವತಿಯರ ಮುಂದೆ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಲ್ಲದೆ, ಮೊಬೈಲ್ ಫೋನ್ ಕಸಿದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲದೆ, ಓರ್ವ ಯುವತಿಯ ಮೇಲೆ ಅತ್ಯಾಚಾರಕ್ಕೂ ಯತ್ನಿಸಿದ್ದಾನೆ ಎನ್ನಲಾಗಿದೆ. ಒಂದೇ ದಿನ ನಡೆದ ಎರಡು ಘಟನೆಗಳಿಂದ ಪಿಜಿಗಳಲ್ಲಿದ್ದ ಯುವತಿಯರು ಆತಂಕಕ್ಕೊಳಗಾಗಿದ್ದರು. ಈ ಸಂಬಂಧ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ
ದೇವನಹಳ್ಳಿ ಎಸಿಪಿ ಶ್ರೀಹರ್ಷ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಲು ತೆರಳಿತ್ತು. ಈ ವೇಳೆ ಬೆಟ್ಟ ನರೇಶ್ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.
ಪೊಲೀಸರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಆರೋಪಿ ಹಿಂದೆ ಸರಿಯಲಿಲ್ಲ. ಬದಲಾಗಿ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾಗಿದ್ದಾನೆ.
ಹೀಗಾಗಿ ಆತ್ಮರಕ್ಷಣೆಗಾಗಿ ಚಿಕ್ಕಜಾಲ ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್ ಅವರು ಗುಂಡು ಹಾರಿಸಿದ್ದಾರೆ. ಗುಂಡು ಆರೋಪಿಯ ಕಾಲಿಗೆ ತಗುಲಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ.

