ಬೆಂಗಳೂರು: ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ? ನಾನು ಮುಖ್ಯಮಂತ್ರಿ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಮೌನವಾಗಿದ್ದೇನೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದರು.
ರಾಯಣ್ಣ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ್ದೇನೆ. ನಿನ್ನೆ ವಿಧಾನಮಂಡಲದ ಅಧಿವೇಶನದಲ್ಲೂ ಭಾಗಿಯಾಗಿದ್ದೇನೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದೇನೆ. ನಾನು ಹೆಚ್ಚು ಮಾತನಾಡುತ್ತಿಲ್ಲ ಅಷ್ಟೇ. ನಾನು ಮುಖ್ಯಮಂತ್ರಿ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಚಿವ ಸ್ಥಾನ ನೀಡಲಾಗುತ್ತಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿಯವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಬಿಜೆಪಿಯವರ ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿಲ್ಲ. ನಾವು ಮಹಿಳೆಯರಿಗೆ ಸಚಿವ ಸ್ಥಾನ ನೀಡಬೇಕು ಎಂಬ ನಿಲುವನ್ನು ಹೊಂದಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.


