ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರನ್ನು ಕೆಲಸದಿಂದ ವಜಾ ಮಾಡುವ ಯಾವುದೇ ಅಧಿಕಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (ಸಿಇಒ) ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.
ಈ ಮೂಲಕ ಜಿ.ಪಂ. ಸಿಇಒ ಹೊರಡಿಸಿದ್ದ ವಜಾ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಾಲಯ, ನೌಕರರ ಪರವಾಗಿ ಮಹತ್ವದ ಆದೇಶ ಹೊರಡಿಸಿದೆ.
ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮ ಪಂಚಾಯಿತಿಯ ಕ್ಲರ್ಕ್ ಕಮ್ ಡೇಟಾ ಎಂಟ್ರಿ ಆಪರೇಟರ್ ಪ್ರವೀಣ್ ಹಂಚಿನಾಳ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಹಾಗೂ ನ್ಯಾ. ಎಂ.ಬೃಂಗೇಶ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.
ವಜಾ ಮಾಡುವ ಹಕ್ಕು ಪಂಚಾಯಿತಿಗಷ್ಟೇ ಸೀಮಿತ
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ-1993ರ ಸೆಕ್ಷನ್ 113(3) ಅನ್ನು ಉಲ್ಲೇಖಿಸಿದ ನ್ಯಾಯಪೀಠ, ಸಿಬ್ಬಂದಿಯ ನೇಮಕಾತಿ ಮತ್ತು ವಜಾಗೊಳಿಸುವ ಅಧಿಕಾರ ಸಂಪೂರ್ಣವಾಗಿ ಆಯಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೇ ಒಳಪಡುತ್ತದೆ. ಹೀಗಾಗಿ, ಸಿಇಒ ನೀಡಿದ್ದ ವಜಾ ಆದೇಶವು ತಮ್ಮ ಕಾನೂನಾತ್ಮಕ ವ್ಯಾಪ್ತಿಯನ್ನು ಮೀರಿದ್ದಾಗಿದ್ದು, ಅದು ಊರ್ಜಿತವಾಗುವುದಿಲ್ಲ ಎಂದು ಪೀಠ ತಿಳಿಸಿದೆ.


