ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ.
ಆದರೆ ಈಗ ಡ್ರಗ್ಸ್‌ಗೆ ಪೇನ್ ಕಿಲ್ಲರ್ ಮಾತ್ರೆ ಬಳಸಲಾಗುತ್ತಿದೆ ಎಂಬ ವಿಷಯ ಬೆಳಕಿಗೆ ಬಂದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ.
ಈಗ ಮೆಡಿಕಲ್ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ಡ್ರಗ್ಸ್ ತಯಾರು ಮಾಡಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಇದನ್ನು ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು.
ಪೇನ್ ಕಿಲ್ಲರ್ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ಇದನ್ನು ಯಾರು ಬೇಕಾದರೂ ಸುಲಭವಾಗಿ ಪಡೆಯಬಹುದಾಗಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ಈ ವಿಷಯದ ಕುರಿತು ಸಿಎಂ ಜೊತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.
ಇನ್ನು ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲ ರೀತಿಯ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ ಎಂದರು.