ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗೆ ಇನ್ನು ಮುಂದೆ ಇವಿಎಂ ಬದಲಿಗೆ ಮತಪತ್ರ ಬಳಕೆ ಮಾಡಲಾಗುವುದು. ಈ ಕುರಿತಾದ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.
ಬಿಜೆಪಿ ಸದಸ್ಯರ ವಿರೋಧ ಮತ್ತು ಸಭಾತ್ಯಾಗದ ನಡುವೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಇವಿಎಂ ಬದಲಿಗೆ ಮತಪತ್ರ ಬಳಕೆ ಮಾಡುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 2026 ಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.
ವಿಧೇಯಕ ಪರ್ಯಾಲೋಚನೆಗೆ ಮಂಡಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಇವಿಎಂ ಬಗ್ಗೆ ವಿಶ್ವಾಸ ಕಡಿಮೆಯಾಗಿ ಕಳವಳ ವ್ಯಕ್ತವಾಗಿದೆ. ಹೀಗಾಗಿ ಚುನಾವಣೆ ಮೇಲಿನ ನಂಬಿಕೆ ಪುನರ್ ಸ್ಥಾಪಿಸಲು ವಿಧೇಯಕ ತರಲಾಗಿದೆ.
ಇವಿಎಂ ಬದಲಿಗೆ ಮತಪತ್ರ ಬಳಕೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯನ್ನು ರಾಜ್ಯ ಚುನಾವಣಾ ಆಯೋಗದಿಂದ ಮಾಡಿಸಲು ವಿಧೇಯಕದಲ್ಲಿ ತಿದ್ದುಪಡಿತರಲಾಗಿದೆ ಎಂದು ಹೇಳಿದ್ದಾರೆ.
ಇವಿಎಂ ಬದಲಿಗೆ ಮತಪೆಟ್ಟಿಗೆ ಬಳಸುವ ಮೂಲಕ ಶಿಲಾಯುಗಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿಧೇಯಕದ ಪ್ರತಿ ಹರಿದು ಹಾಕಿ ಸದಸ್ಯರೊಂದಿಗೆ ಸಭಾತ್ಯಾಗ ಮಾಡಿದ್ದಾರೆ. ಬಿಜೆಪಿ ಸದಸ್ಯರ ಅನುಪಸ್ಥಿತಿಯಲ್ಲಿ ವಿಧಾನಸಭೆ ವಿಧೇಯಕಕ್ಕೆ ಅಂಗೀಕಾರ ನೀಡಿದೆ.




