Ad imageAd image
- Advertisement -  - Advertisement -  - Advertisement - 

ಜುಲೈ 22ಕ್ಕೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ಶಾಲೆ ಆರಂಭ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ

Bharath Vaibhav
ಜುಲೈ  22ಕ್ಕೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ಶಾಲೆ ಆರಂಭ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ  ಹೆಬ್ಬಾಳಕರ್ ಹೇಳಿಕೆ
laxmi hebbalkar
WhatsApp Group Join Now
Telegram Group Join Now

ಬೆಂಗಳೂರು: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ, ಯು.ಕೆ.ಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದರು.

 ಗವರ್ನಮೆಂಟ್ ಮಾಂಟೆಸ್ಸರಿ ಆರಂಭ
ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದರು.

 ಅಂಗನವಾಡಿ ಕೊಡುಗೆ ಅಪಾರ
ಸಮಾಜಕ್ಕೆ ಅಂಗನವಾಡಿ ಕೊಡುಗೆ ಅಪಾರ. ಕಳೆದ 50 ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿವೆ. ಇನ್ಮುಂದೆ ಗವರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾಗಲಿದ್ದು, ಇತರ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗುಣಮಟ್ಟದ ಶಿಕ್ಷಣ ನೀಡುವುದೇ ಗುರಿ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಬಯಸುವುದು ಪ್ರತಿಯೊಬ್ಬ ಪಾಲಕರ ಕನಸಾಗಿರುತ್ತದೆ. ಗುಣಮಟ್ಟದ ಶಿಕ್ಷಣದ ಬಗ್ಗೆ ಶಿಕ್ಷಣ ಇಲಾಖೆ ಯೋಚಿಸುವುದು ತಪ್ಪಲ್ಲ. ಆದರೆ, ಅಂಗನವಾಡಿಗೆ ಪೆಟ್ಟು ಬೀಳಬಾರದು. ನಾವೇ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗೋಣ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇಂಥ ಶಿಬಿರಗಳನ್ನು ಆಯೋಜಿಸಿ, ಗುಣಮಟ್ಟಕ್ಕೆ ಆದ್ಯತೆ ನೀಡೋಣ ಎಂದರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

 ಶೀಘ್ರವೇ ಇನ್ಸೂರೆನ್ಸ್ ತೀರ್ಮಾನ
ಅಂಗನವಾಡಿ ಕಾರ್ಯಕರ್ತರಿಗೆ ಇನ್ಯುರೆನ್ಸ್ ನೀಡುವ ಕುರಿತು ಶೀಘ್ರವೇ ತೀರ್ಮಾನಿಸಲಾಗುವುದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಲಾಗುವುದು. ಗೌರವ ಧನ ಹೆಚ್ಚಳದ ಬಗ್ಗೆಯೂ ಸಿಎಂ ಜೊತೆಗೆ ಚರ್ಚಿಸಿದ್ದು, ಶೀಘ್ರವೇ ಕಾರ್ಯರೂಪಕ್ಕೆ ತರುವ ಕೆಲಸ ಆಗಲಿದೆ ಎಂದು ಸಚಿವರು ತಿಳಿಸಿದರು.

ಹೆಣ್ಣಿಗೆ ಹೋರಾಟವೇ ಮನೋಬಲ
ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೆ ಹೋರಾಟ ಮನೋಭಾವದಿಂದ ನಾನು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿರುವೆ. ಸಮಾಜದಲ್ಲಿ ಮಹಿಳೆಯರಿಗಿಂತ ಪುರುಷರಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಗಂಡು ಮಕ್ಕಳಿಗೆ ಸಿಗುವ ಮರ್ಯಾದೆ ಹೆಣ್ಣುಮಕ್ಕಳಿಗೆ ಇರುವುದಿಲ್ಲ. ಇದು ಸಮಾಜದಲ್ಲಿ ಅಲ್ಲ, ಇದು ನಮ್ಮ ಮನೆಗಳಲ್ಲೇ ಅಧಿಕವಾಗಿದೆ. ಹೆಣ್ಣು ಮಕ್ಕಳು ಜೋರಾಗಿ ಮಾತಾಡಿದರೂ ಕಷ್ಟ. ಎಷ್ಟೋ ಕಷ್ಟಗಳನ್ನು ಮೆಟ್ಟಿನಿಂತು ಹೆಣ್ಣು ಸಮಾಜಕ್ಕೆ ಮಾದರಿಯಾಗಿ ಬದುಕುತ್ತಿದ್ದಾಳೆ ಎಂದರು.

ಸಮಾರಂಭದಲ್ಲಿ ಹಂಪಿ ಕನ್ನಡ ವಿ.ವಿಯ ನಿವೃತ್ತ ಪ್ರಾಧ್ಯಾಪಕರು ಹಾಗೂ ಅಂಕಣಕಾರರಾದ ಟಿ.ಆರ್.ಚಂದ್ರಶೇಖರ್, ಸಿ.ಐ.ಟಿ.ಯು ಕರ್ನಾಟಕ ಹಾಗೂ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಎಸ್. ವರಲಕ್ಷ್ಮೀ, ಕಾರ್ಯದರ್ಶಿ ಯಮುನಾ ಗಾಂವ್ಕರ್, ಕಾರ್ಯಾಧ್ಯಕ್ಷರಾದ ಶಾಂತ ಎನ್.ಘಂಟೆ, ಖಜಾಂಚಿ ಜಿ‌.ಕಮಲಾ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದ ಸೇರಿದಂತೆ ರಾಜ್ಯಮಟ್ಟದ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ :-ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!