ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕೆ.ಪಿ. ಅಗ್ರಹಾರ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೋವಿಂದರಾಜು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಈ ಹಣವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.
ಕರ್ತವ್ಯ ಲೋಪ ಮತ್ತು ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ, ಹಿರಿಯ ಪೊಲೀಸ್ ಅಧಿಕಾರಿಗಳು ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಪೊಲೀಸ್ ಕಮಿಷನರ್ ಸೀಮಂತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಈ ಕುರಿತು ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.
ಮೈಸೂರು ರಸ್ತೆಯ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಪೊಲೀಸ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದರು.ಚೀಟಿ ವ್ಯವಹಾರ ಕೇಸ್ ಗೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಚೀಟಿ ಕೇಸ್ ನಲ್ಲಿ ವ್ಯಕ್ತಿಯೊಬ್ಬರನ್ನು ಹೆದರಿಸಿ ಲಂಚಕ್ಕೆ ಬೇದಿಕೆ ಇಟ್ಟಿದ್ದ ಇನ್ಸ್ ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದರು.




