ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಕೆಲವು ಕಡೆ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ.
ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಿಗೆ ಶುಕ್ರವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಳ್ಳಾರಿ ದಾವಣಗೆರೆ ಚಿತ್ರದುರ್ಗ ಜಿಲ್ಲೆಯ ಕೆಲವು ಕಡೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಂಭವ ಇದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮೇ 20ರವರೆಗೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.