ಮೈಸೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 5800 ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮೈಸೂರಿನ ಕಲಾಮಂದಿರದಲ್ಲಿ ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಭಾನುವಾರ ಆಯೋಜಿಸಿದ್ದ ಮಕ್ಕಳ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎರಡನೇ ಬಾರಿಗೆ ಮಕ್ಕಳ ದಸರಾ ಉದ್ಘಾಟಿಸಿದ್ದೇನೆ. ಕಳೆದ ಬಾರಿ ನನಗೆ ಇಲಾಖೆ ಹೊಸದಾಗಿತ್ತು. ಇದೀಗ ಸಾಕಷ್ಟು ಸುಧಾರಣೆ ಮಾಡಿದ್ದೇನೆ. 12,000 ಶಿಕ್ಷಕರ ನೇಮಕ ಮಾಡಲಾಗಿದೆ. ಕಲ್ಯಾಣ ಕರ್ನಾಟಕದಲ್ಲಿ 5800 ಶಿಕ್ಷಕರ ನೇಮಕಾತಿ ಮಾಡುವ ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಿದ್ದಾರೆ.
ಸರ್ಕಾರಿ ಶಾಲೆಗಳಿಗೆ ಸಾಕಷ್ಟು ಮಕ್ಕಳು ದಾಖಲಾಗುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಕೊರತೆ ಇದ್ದರೂ ವಿಶ್ವಾಸ ಕಳೆದುಕೊಂಡಿಲ್ಲ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಇದ್ದಾರೆ. ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅನೇಕ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳಿಗೆ 6 ದಿನ ಮೊಟ್ಟೆ ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.