ಬೆಂಗಳೂರು : ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ರಾಜ್ಯದ ಪಾಲಿನ ಜಿಎಸ್‌ಟಿ ತೆರಿಗೆ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಬಿಜೆಪಿ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ.
ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು. ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ ನಾಯಕರು ಮತ್ತು ಸಂಸದರು ಅನ್ಯಾಯಕೋರ ಕೇಂದ್ರ ಸರ್ಕಾರವನ್ನು ಸಮರ್ಥಿಸುತ್ತಿರುವುದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಎಂದಿದ್ದಾರೆ.
ಕೇಂದ್ರ ಸರ್ಕಾರ ಇತ್ತೀಚೆಗೆ ರಾಜ್ಯಗಳಿಗೆ ತೆರಿಗೆ ಮತ್ತು ಸುಂಕದ ಪಾಲಿನ ರೂಪದಲ್ಲಿ ಒಟ್ಟು ರೂ1,73,030 ಕೋಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ನೀಡಿರುವ ಪಾಲು ಕೇವಲ 6,310 ಕೋಟಿ ರೂಪಾಯಿ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ ಐದರಷ್ಟು ಕನ್ನಡಿಗರಿದ್ದರೂ ದೇಶದ ಜಿಡಿಪಿಯಲ್ಲಿ ಕನ್ನಡಿಗರ ಪಾಲಿನ ಪ್ರಮಾಣ ಶೇ 8.4 ಆಗಿದೆ.
ಅತೀ ಹೆಚ್ಚು ಜಿಎಸ್‌ಟಿ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ‍್ಥಾನದಲ್ಲಿದೆ. ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇ.17ರಷ್ಟು ಹೆಚ್ಚಾಗುತ್ತಿದೆ. ಹೀಗಿದ್ದರೂ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡುತ್ತಾ ಬರಲಾಗುತ್ತಿದೆ. ಈ ಅನ್ಯಾಯ ಯಾಕೆ ಎಂದು ಸಿಎಂ ಪ್ರಶ್ನಿಸಿದ್ದಾರೆ.
ಕರ್ನಾಟಕದ ಜನತೆ ತೆರಿಗೆ ಮತ್ತು ಸುಂಕದ ಮೂಲಕ ಪ್ರತಿವರ್ಷ ನಾಲ್ಕುವರೆ ಲಕ್ಷ ಕೋಟಿ ರೂಪಾಯಿಗಳನ್ನು ಕೇಂದ್ರದ ಬೊಕ್ಕಸಕ್ಕೆ ನೀಡುತ್ತಿದೆ. ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ತೆರಿಗೆ ಪಾಲಿನ ರೂಪದಲ್ಲಿ ರೂ.45,000 ಕೋಟಿ ಮತ್ತು ಅನುದಾನವಾಗಿ ರೂ.15,000 ಕೋಟಿ ನೀಡುತ್ತಿದೆ. ಅಂದರೆ ನಾವು ನೀಡುತ್ತಿರುವ ಒಂದು ರೂಪಾಯಿಗೆ ಕೇವಲ 13 ಪೈಸೆಯಷ್ಟು ಮಾತ್ರ ವಾಪಸು ನೀಡುತ್ತಿದೆ ಸಿಎಂ ಆರೋಪಿಸಿದ್ದಾರೆ.