ದೇವರಗುಡ್ಡ : ನನ್ನ ವಿರುದ್ಧ ನಡೆಯುತ್ತಿರುವ BJP-JDS ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದರು..
ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಸಹಿಸುತ್ತೀರಾ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸ್ತೋಮಕ್ಕೆ ಸಿಎಂ ಪ್ರಶ್ನಿಸಿದರು.
ಮಾಲತೇಶ ದೇವರ ಆಶೀರ್ವಾದ-ನಿಮ್ಮ ಪ್ರೀತಿ ನನ್ನ ಮೇಲಿರಲಿ, ದೇವರಗುಡ್ಡದಲ್ಲಿ ಪೂಜೆ ಸಲ್ಲಿಸಿದ ಬಳಿಕ ಬಹಿರಂಗ ಸಭೆಯಲ್ಲಿ ಸಿಎಂ ಮನವಿ ಮಾಡಿದರು.
ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕುವ ಮೂಲಕ ನುಡಿದಂತೆ ನಡೆದಿದ್ದೇನೆ. ಎರಡನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇನೆ ಎಂದರು.
ನಾನು ಅಸೂಯೆ ಮಾಡುವವರಿಂದ ದ್ವೇಷದ ರಾಜಕಾರಣ ಮಾಡುವವರಿಂದ ಅಧಿಕಾರಕ್ಕೆ ಬರಲಿಲ್ಲ. ಜನರ ಆಶೀರ್ವಾದದಿಂದ ಹಿಂದುಳಿದ ಸಮಾಜದ ಸಿದ್ದರಾಮಯ್ಯ ಸಿಎಂ ಆಗಿರೋದು. ಜನರ ಆಶೀರ್ವಾದ ಇರುವವರೆಗೂ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ ಎಂದು BJP-JDS ಗೆ ಎಚ್ಚರಿಕೆ ನೀಡಿದರು.
ಜಾತಿ ವ್ಯವಸ್ಥೆಯ ಈ ಸಮಾಜದಲ್ಲಿ ಅತ್ಯಂತ ಕಟ್ಟ ಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು ಎಂದು ಮಹಾತ್ಮಗಾಂಧಿ ಹೇಳಿದ್ದರು. ಇದರಲ್ಲಿ ನಂಬಿಕೆ ಇಟ್ಟು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಇದೇ BJP-JDS ನವರಿಗೆ ಹೊಟ್ಟೆಕಿಚ್ಚು. ಈ ಹೊಟ್ಟೆಕಿಚ್ಚಿನಿಂದ ಅವರೇ ನಾಶ ಆಗುತ್ತಾರೆಯೇ ಹೊರತು ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಎಚ್ಚರಿಸಿದರು.