ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್ ಆಫ್ ಇನ್‌ಕ್ವೈರಿ ಆಯಕ್ಟ್ 1952ರ ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ.
ಈ ಆಯೋಗವು 2 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ.
ಆಯೋಗದ ವರದಿ ಬಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.