ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಪೊಲೀಸರು ನ.6ರಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ನಡೆಸಲಿದ್ದಾರೆ.
ಅಕ್ಟೋಬರ್ 25ರಂದು ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.
ಮುಡಾದ ಮಾಜಿ ಮತ್ತು ಹಾಲಿ ಅಧಿಕಾರಿಗಳು ಸೇರಿದಂತೆ ಪ್ರಕರಣದ ಇತರ ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ಈಗಾಗಲೇ ಪ್ರಶ್ನಿಸಿದ್ದಾರೆ.
ಈ ಕುರಿತು ಮಾತನಾಡಿದ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್, ‘ಮುಖ್ಯಮಂತ್ರಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಬುಧವಾರ ವಿಚಾರಣೆ ನಡೆಸಲಾಗುವುದು” ಎಂದರು.
ಮೈಸೂರು ಮೂಲದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25 ರಂದು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿತ್ತು.
2004ರ ಆಗಸ್ಟ್ 25ರಂದು ಮೈಸೂರು ತಾಲೂಕಿನ ಕೆಸರೆ ಗ್ರಾಮದ ಸರ್ವೆ ನಂ.464ರಲ್ಲಿ 3.16 ಎಕರೆ ಜಮೀನನ್ನು ಸಿದ್ದರಾಮಯ್ಯ ಅವರ ಸೋದರ ಮಾವ ಬಿ.ಎಂ.ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಜೆ.ದೇವರಾಜು ಮಾರಾಟ ಮಾಡಿದ್ದರು.
ನಂತರ, ಇದನ್ನು ಕೃಷಿ ಭೂಮಿಯಿಂದ ಕೃಷಿಯೇತರ ಭೂಮಿಯಾಗಿ ಪರಿವರ್ತಿಸಲಾಯಿತು. ಅಕ್ಟೋಬರ್ 6, 2010 ರಂದು ಮಲ್ಲಿಕಾರ್ಜುನ ಸ್ವಾಮಿ ತಮ್ಮ ಸಹೋದರಿ ಪಾರ್ವತಿಗೆ ಭೂಮಿಯನ್ನು ಉಡುಗೊರೆಯಾಗಿ ನೀಡಿದರು.
ಮುಡಾ ಅಭಿವೃದ್ಧಿಪಡಿಸಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳದೆ ಪರಿಹಾರ ಕೋರಿ ಪಾರ್ವತಿ 2014 ರಿಂದ ಮುಡಾಗೆ ಅನೇಕ ಮನವಿಗಳನ್ನು ಸಲ್ಲಿಸಿದ್ದರು.