ಬೆಂಗಳೂರು : ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಕುರಿತು ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತ ವಿಶೇಷ ಸಂಪುಟ ಸಭೆಯ ಬಳಿಕ ಎಕ್ಸ್ ಮೂಲಕ ಮಾಹಿತಿ ನೀಡಿರುವ ಸಿಎಂ, ಈ ಸಮೀಕ್ಷೆಯ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಇಂದಿನ ಚರ್ಚೆ ಅಪೂರ್ಣವಾಗಿದೆ. ಅತ್ಯಂತ ಸೌಹಾರ್ದಯುತವಾಗಿ ನಡೆದ ಚರ್ಚೆಯಲ್ಲಿ ಜನಸಂಖ್ಯೆ ಹಿಂದುಳಿದಿರುವಿಕೆ, ಅಧ್ಯಯನ ಮಾಡುವ ಸಂದರ್ಭದಲ್ಲಿ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳ ವಿವರಗಳನ್ನು ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದ್ದು, ಚರ್ಚೆ ಅಪೂರ್ಣವಾಗಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆ ಏಪ್ರಿಲ್ 24 ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದು, ಆಯಾ ಭಾಗದ ವಿಷಯಗಳು ಹೆಚ್ಚಾಗಿ ಚರ್ಚೆಗೆ ಬರುತ್ತದೆ. ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ವಿವರಿಸಿದರು.
ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಉತ್ಪನ್ನದ ಮೂಲ ಹಾಗೂ ಕೈಗೊಂಡ ಮಾನದಂಡಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೆಲವು ಹಿರಿಯ ಸಚಿವರು ಮಾರ್ಗದರ್ಶನ ಮಾಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ.
ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆಗಳು ಹೊರಬೀಳುತ್ತಿದ್ದು, ಅವುಗಳು ಸರಿಯಾದ ವಿವರಗಳಲ್ಲ. 94.17% ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. ವರದಿ ಮಂಡನೆಯಾಗಿ ಚರ್ಚೆ ನಡೆಸಲಾಗಿದೆ ಎಂದರು.