ಬೆಂಗಳೂರು: “ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ.
ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುಡುಗಿದ್ದಾರೆ.
ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.
ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ ಯೋಜನೆ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ನೀಡಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಡಿಸಿಎಂ ಅವರು ಹೀಗೆ ಪ್ರತಿಕ್ರಿಯಿಸಿದರು.
ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ. ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣದ ತೀರ್ಪು ಹೊರಬಿದ್ದಿದೆ.
ಯೋಜನೆ ಜಾರಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು, ಸ್ಥಳೀಯ ಸಂಸದರು ಹಾಗೂ ಕೇಂದ್ರದ ಹಾಲಿ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಈ ಯೋಜನೆ ಜಾರಿಯಾಗಲಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು” ಎಂದರು.




