ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಕಣಕೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಕೆ. ಮತ್ತು ಉಪಾಧ್ಯಕ್ಷರಾಗಿ ಅಂದಾನಿಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025 ರ ಮೇ 31ರಂದು ಸಂಘದ ನೂತನ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯು ಜೂನ್ 10 ರಂದು ನಡೆದು ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ್ ಕೆ. ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅಂದಾನಿಗೌಡ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಕಣಕೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ್, ಉಪಾಧ್ಯಕ್ಷರಾಗಿ ಅಂದಾನಿಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಲತಾ ಘೋಷಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ನೂತನ ಅಧ್ಯಕ್ಷರಾದ ಶ್ರೀನಿವಾಸ್ ಕೆ, ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಸರ್ವ ನಿರ್ದೇಶಕರುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಸಂಘದ ಸರ್ವ ನಿರ್ದೇಶಕರ ಜೊತೆಗೂಡಿ ಸಂಘದ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳ ರೈತರಿಗೆ ಸರ್ಕಾರಿದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ದೊರಕಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಮತ್ತು ಸಹಕಾರ ಸಂಘದ ಶ್ರೇಯೋಭಿವೃದ್ಧಿಗಾಗಿ, ಸಂಘದ ಏಳಿಗೆಗಾಗಿ ದುಡಿಯುವುದಾಗಿ ತಿಳಿಸಿದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯ ಘೋಷಣೆಯಾಗುತ್ತಿದ್ದಂತೆ ತಮ್ಮ ಬೆಂಬಲಿಗರು, ಅಭಿಮಾನಿಗಳು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು ಸ್ಥಳೀಯ ಮುಖಂಡರುಗಳು, ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳು, ನಾಗರೀಕರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯ ನೂತನ ನಿರ್ದೇಶಕರಾದ ಕಾಂತರಾಜು, ಕೆಂಚಯ್ಯ, ರಮೇಶ್, ಮೇಘ, ವನಜಾಕ್ಷಮ್ಮ, ಜಹೀರ್, ನಂದೀಪ್, ಕರಿಯಪ್ಪ, ನಾಗರಾಜು, ಮುಕ್ಕುಂದ ಹಾಗೂ ಮುಖಂಡರಾದ ರಾಜಣ್ಣ, ತಿಮ್ಮೇಗೌಡ, ಲಕ್ಕೇಗೌಡ್ರು, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು
ವರದಿ : ಗಿರೀಶ್ ಕೆ ಭಟ್




