ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದಿನಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ಪ್ರತಿದಿನ ಐದು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ ತಿಳಿಸಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಬಾಣಂತಿಯರ ಸಾವಿನ ಪ್ರಕರಣ ತಡೆಯುವಲ್ಲಿ ಸಂಪೂರ್ಣ ವಿಫಲರಾಗಿದ್ದು, ಅವರು ರಾಜೀನಾಮೆ ನೀಡಿ ಮನೆಗೆ ಹೋಗಬೇಕು. ಇತ್ಢ ಲಕ್ಷ್ಮಿ ಹೆಬ್ಬಾಳ್ಕರ್ ಬಾಣಂತಿಯರ ಸಾವಿನ ಸಂಬಂಧ ಒಬ್ಬರನ್ನೂ ಭೇಟಿ ಮಾಡಿ ಸಾಂತ್ವನ ಹೇಳಿಲ್ಲ. ಅವರು ಕೂಡ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಬಾಣಂತಿಯರ ಸಾವನ್ನು ರಾಜ್ಯ ಸರ್ಕಾರದ ತಡೆಯಲು ಆಗದ ಕಾರಣ ಇಡೀ ರಾಜ್ಯದಲ್ಲಿ ಪ್ರತಿದಿನ ಐದು ಜಿಲ್ಲೆಗಳಲ್ಲಿ ಮಹಿಳಾ ಮೋರ್ಚಾ ಜಿಲ್ಲಾ ಘಟಕಗಳಿಂದ ಪ್ರತಿಭಟನೆ ನಡೆಸಲಾಗುವುದು.
ಪ್ರತಿ ಮೃತ ಬಾಣಂತಿ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಅವರ ಮಕ್ಕಳನ್ನು ದತ್ತು ಸ್ವೀಕರಿಸಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.