ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಪೊಲೀಸರು ನಾಲ್ಕೈದು ಬಾರಿ ಲಾಠಿ ಪ್ರಹಾರ ನಡೆಸಿದ್ದಾರೆ.
ಸೆಪ್ಟಂಬರ್ 14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಾಗಮಂಗಲದ ಟಿಬಿ ಬಡಾವಣೆಯ ಬದರಿ ಕೊಪ್ಪಲಿನ ಗಜ ಪಡೆ ಯುವಕರ ಸಂಘದಿಂದ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯನ್ನು ವಿಸರ್ಜನೆ ಪೂರ್ವ ಮೆರವಣಿಗೆ ವೇಳೆ ಘಟನೆ ನಡೆದಿದೆ.
ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ತಾಲೂಕು ಕಚೇರಿ ಸಮೀಪ ಮಂಡ್ಯ ಸರ್ಕಲ್ ಗೆ ಆಗಮಿಸಿದಾಗ ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಾಟಲಿ, ಕಲ್ಲುಗಳನ್ನು ತೂರಲಾಗಿದ್ದು, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಅನ್ನಕೋಮಿನವರ ಗುಂಪು ಮೆರವಣಿಗೆ ನಡೆಸುತ್ತಿದ್ದವರ ಮೇಲೆ ಕಲ್ಲುಗಳಿಂದ ತೀವ್ರ ಹಲ್ಲೆ ನಡೆಸಿದ್ದು, ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿ ದಾಳಿ ನಡೆಸಿದ್ದಾರೆ.
ಅಂಗಡಿ, ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಗಲಾಟೆ ಕೋಮು ಗಲಭೆಗೆ ತಿರುಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಶಾಂತಿಯುತ ಮೆರವಣಿಗೆ ನಡೆಯುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಿದ ಕಿಡಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಲಾಗಿದೆ.ಈಗಾಗಲೇ 50 ಜನರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.