ಬೆಂಗಳೂರು: ತಮಿಳುನಾಡು ಸಚಿವ ಪೊನ್ಮುಡಿ ಅವರ ನೇತೃತ್ವದ ನಿಯೋಗ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಕ್ಷೇತ್ರ ಮರುವಿಂಗಡನೆ ಸೇರಿದಂತೆ ದ.ಭಾರತದ ಪ್ರಮುಖ ವಿಚಾರಗಳ ಬಗ್ಗೆ ಕೇಂದ್ರದ ನಡೆಯ ಬಗ್ಗೆ ಚರ್ಚೆ ನಡೆಸಿದರು. ಇದೇ ವೇಳೆ ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.
ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ದೂರವಾಣಿ ಮೂಲಕ ಇದೇ ವಿಚಾರಗಳ ಬಗ್ಗೆ ಚರ್ಚಿಸಿದ್ದು, ಸಿದ್ದರಾಮಯ್ಯ ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.
ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ಸಿಎಂ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.



