ಬೆಂಗಳೂರು : ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ. ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಹೌದು. ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ರಾಜ್ಯ ಸರ್ಕಾರಿ ಸೇವೆಯಲ್ಲಿ ಉದ್ಯೋಗ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದಾಗಿ ಅಭ್ಯರ್ಥಿಗೆ ನೇಮಕಾತಿ ಆದೇಶದ ಪ್ರತಿಯನ್ನು ನೀಡಿ ಶುಭ ಹಾರೈಸಿದರು.
ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಎಮ್.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಇಂದು ಮುಖ್ಯಮಂತ್ರಿ ಅವರು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.
ಅನುಕಂಪದ ಆಧಾರ: ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿದ್ದಾಗಲೇ (ನವೆಂಬರ್ 25, 2025) ಅಪಘಾತದಲ್ಲಿ ನಿಧನರಾದ ಕಾರಣ, ಅವರ ಕುಟುಂಬಕ್ಕೆ ಆಸರೆಯಾಗಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಯಾವ ಹುದ್ದೆ..? ಸಂಬಳ ಎಷ್ಟಿದೆ..?
ಅಭ್ಯರ್ಥಿ: ಚೈತನ್ಯಾ ಎಂ. ಬೀಳಗಿ (ದಿ. ಮಹಾಂತೇಶ್ ಬೀಳಗಿ ಅವರ ಪುತ್ರಿ).
ಹುದ್ದೆ: ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕ (Assistant) ಹುದ್ದೆ (ಗ್ರೂಪ್-ಸಿ).
ವೇತನ ಶ್ರೇಣಿ: ₹49,050 – ₹92,500.
ಆದೇಶ ವಿತರಣೆ: ಜನವರಿ 28, 2026ರ ಬುಧವಾರದಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದಾಗಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ಅಡಿಯಲ್ಲಿ ಈ ನೇಮಕಾತಿ ನಡೆದಿದೆ.




