ಬೆಂಗಳೂರು: ಕನ್ನಡಿಗರ ನೆಲ, ಜಲ ಪಡೆದುಕೊಂಡು ಅವರಿಗೆ ಉದ್ಯೋಗ ನೀಡದೆ, ಅಧಿಕಾರಿಗಳ ಹುದ್ದೆಗಳಿಗೆ ಕನ್ನಡಿಗರನ್ನು ನೇಮಕ ಮಾಡಲೇ ಜವಾನ ಜಾಡಮಾಲಿಯಂತಹ ಸಿ, ಡಿ ದರ್ಜೆ ಹುದ್ದೆಗಳಿಗೆ ಮಾತ್ರ ಕನ್ನಡಿಗರನ್ನು ನೇಮಕ ಮಾಡಿದರೆ ಉದ್ಯೋಗ ಕಲ್ಪಿಸಿದಂತಲ್ಲ, ಎಲ್ಲಾ ಹಂತದ ಹುದ್ದೆಗಳಿಗೂ ಕನ್ನಡಿಗರಿಗೆ ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್ ತಾಕೀತು ಮಾಡಿದೆ.
ತನಗೆ ಮಂಜೂರಾಗಿದ್ದ ನಾಲ್ಕು ಎಕರೆ ಜಮೀನನ್ನು ರದ್ದುಪಡಿಸಿದ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ(KIADB) ಕ್ರಮ ಪ್ರಶ್ನಿಸಿ ಐಡಿಬಿಐ ಬ್ಯಾಂಕ್ ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆದಿದೆ.
ಕನ್ನಡಿಗರಿಗೆ ಉದ್ಯೋಗ ನೀಡಲು ಬ್ಯಾಂಕ್ ಹಿಂದೇಟು ಹಾಕಿರುವ ಅಂಶವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ ಕೇವಲ ಸಿ ಮತ್ತು ಡಿ ದರ್ಜೆ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವುದನ್ನು ಹೇಗೆ ತಾನೇ ಒಪ್ಪಲು ಸಾಧ್ಯ ಎಂದು ಖಾರವಾಗಿ ಪ್ರಶ್ನಿಸಿದೆ. ಎಲ್ಲಾ ಹಂತದ ಹುದ್ದೆಗಳಲ್ಲಿಯೂ ಕನ್ನಡಿಗರಿಗೆ ಅವಕಾಶ ಕಲ್ಪಿಸಬೇಕು ಎಂದು ತಾಕೀತು ಮಾಡಿದೆ.
ಜಮೀನು ಹಂಚಿಕೆ ಮಾಡಿ ನೀಡಿದ್ದ ಮಂಜೂರಾತಿ ಪ್ರಮಾಣ ಪತ್ರ ರದ್ದುಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಯಾತಸ್ಥಿತಿ ಕಾಯ್ದುಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಐಡಿಬಿಐ ಬ್ಯಾಂಕಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ, ಸಂಸ್ಥೆಯಲ್ಲಿ ಕನ್ನಡಿಗರಿಗೆ ಶೇಕಡ 80ರಷ್ಟು ಉದ್ಯೋಗ ನೀಡುವುದಾಗಿ ಪ್ರಮಾಣ ಪತ್ರ ಸಲ್ಲಿಸುವಂತೆ ಐಡಿಬಿಐ ಬ್ಯಾಂಕಿಗೆ ನ್ಯಾಯಪೀಠ ತಾಕೀತು ಮಾಡಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಕೆಐಎಡಿಬಿ ಅಭಿವೃದ್ಧಿಪಡಿಸಿದ ಬೆಂಗಳೂರು ಹಾರ್ಡ್ವೇರ್ ಪಾರ್ಕ್ ನಲ್ಲಿ 4.5 ಎಕರೆಯನ್ನು ಐಡಿಬಿಐ ಬ್ಯಾಂಕಿಗೆ 2013ರಲ್ಲಿ ಹಂಚಿಕೆ ಮಾಡಲಾಗಿತ್ತು.
ಬ್ಯಾಂಕಿನ ರೀಜನಲ್ ಪ್ರೋಸೆಸಿಂಗ್ ಯೂನಿಟ್, ಕಾಲ್ ಸೆಂಟರ್, ಸಿಬ್ಬಂದಿ ವಸತಿ ನಿಲಯ ಸೇರಿ ಇನ್ನಿತರ ಕಟ್ಟಡ ನಿರ್ಮಾಣಕ್ಕಾಗಿ ಈ ಜಮೀನು ಹಂಚಿಕೆ ಮಾಡಿದ್ದು, ಎರಡು ವರ್ಷದಲ್ಲಿ ಯೋಜನೆ ಜಾರಿಗೊಳಿಸಬೇಕು. ಅಧಿಕಾರಿಗಳ ಹುದ್ದೆಗಳಿಗೆ ಕನ್ನಡಿಗರನ್ನು ನೇಮಕ ಮಾಡಬೇಕು ಎಂದು ಹಂಚಿಕೆ ಸಮಯದಲ್ಲಿ ಷರತ್ತು ವಿಧಿಸಲಾಗಿತ್ತು.
10 ಹತ್ತು ವರ್ಷಗಳಾದರೂ ಯೋಜನೆ ಜಾರಿ ಮಾಡದ ಹಿನ್ನೆಲೆಯಲ್ಲಿ ಜಮೀನು ಹಂಚಿಕೆ ಪತ್ರ ರದ್ದುಪಡಿಸಿ 2023ರ ಜುಲೈ 14ರಂದು ಕೆಐಎಡಿಬಿ ಆದೇಶಿಸಿತ್ತು. ಈ ಕ್ರಮ ಪ್ರಶ್ನಿಸಿ ಬ್ಯಾಂಕ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಆರ್ಜಿಯನ್ನು ಏಕಸದಸ್ಯ ನ್ಯಾಯಪೀಠ 2024ರ ಮಾರ್ಚ್ 6ರಂದು ವಜಾಗೊಳಿಸಿತ್ತು.