ಬೆಂಗಳೂರು: ಕಳೆದ ನಾಲ್ಕು ವರ್ಷದಿಂದ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ.
ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದಿಂದ ಸಂವಿಧಾನದ 73 ಮತ್ತು 74ನೇ ವಿಧಿಗೆ ತಂದಿರುವ ತಿದ್ದುಪಡಿಯಿಂದ ಕರ್ನಾಟಕ ರಾಜ್ಯಕ್ಕೆ ವಿನಾಯಿತಿ ಇದೆ ಎಂದು ಸರ್ಕಾರವನ್ನು ತೀಕ್ಷ್ಣವಾಗಿ ಪ್ರಶ್ನಿಸಿದೆ.
ಹೈಕೋರ್ಟ್ ಗೆ ನೀಡಿದ್ದ ಭರವಸೆಯಂತೆ ನಿಗದಿದ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಸರ್ಕಾರದ ಈ ಕ್ರಮಕ್ಕೆ ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಮತ್ತಿತರರು ಮೂರು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದೆ. ಅರ್ಜಿದಾರರ ಪರ ವಕೀಲ ಮಹಮ್ಮದ್ ತಾಹಿರ್, ಕಾನೂನಿನ ಪ್ರಕಾರ ಅವಧಿ ಮುಗಿದ ಆರು ತಿಂಗಳಲ್ಲಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ ನಡೆಸಬೇಕು. ನಾಲ್ಕು ವರ್ಷ ಕಳೆದಿದ್ದರೂ ಚುನಾವಣೆ ನಡೆಸಿಲ್ಲ ಎಂದು ನ್ಯಾಯ ಪೀಠದ ಗಮನಕ್ಕೆ ತಂದಿದ್ದಾರೆ.
ಇದಕ್ಕೆ ಅಚ್ಚರಿಗೊಂಡ ಮುಖ್ಯ ನ್ಯಾಯಮೂರ್ತಿಗಳು, ನಾಲ್ಕು ವರ್ಷದಿಂದ ಚುನಾವಣೆ ನಡೆದಿಲ್ಲವೇ? ಕರ್ನಾಟಕ ವಿನಾಯಿತಿ ಪಡೆದಿದೆಯೇ ಎಂದು ಸರ್ಕಾರಿ ವಕೀಲರನ್ನು ಕಟುವಾಗಿ ಪ್ರಶ್ನಿಸಿದ್ದಾರೆ. ರಾಜ್ಯ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು, ಲೋಕಸಭೆ ಚುನಾವಣೆ ಹಾಗೂ ಇನ್ನಿತರ ಕಾರಣಗಳಿಂದ ಜಿಪಂ, ತಾಪಂ ಚುನಾವಣೆ ವಿಳಂಬವಾಗಿದ್ದು, ಎಲ್ಲಾ 31 ಜಿಲ್ಲಾ ಪಂಚಾಯತಿಗಳ ಕ್ಷೇತ್ರ ಪುನರ್ ವಿಂಗಡಣೆ ಕಾರ್ಯ ಪೂರ್ಣಗೊಂಡಿದೆ. ಮೀಸಲು ನಿಗದಿ ಪ್ರಕ್ರಿಯೆ ಆರಂಭವಾಗಿದ್ದು, ಪೂರ್ಣಗೊಳಿಸಲು ನಾಲ್ಕು ವಾರ ಕಾಲಾವಕಾಶ ಬೇಕಿದೆ ಎಂದು ಹೇಳಿದ್ದಾರೆ. ವಾದ, ಪ್ರತಿವಾದ ಆಲಿಸಿದ ನ್ಯಾಯಪೀಠ ಸೆಪ್ಟಂಬರ್ 5 ಕ್ಕೆ ಅರ್ಜಿಗಳ ವಿಚಾರಣೆ ಮುಂದೂಡಿದೆ.