Ad imageAd image

ಈಗಿನ ದೇವೇಗೌಡರು ಬಿಜೆಪಿಯ ಚಿಯರ್ ಲೀಡರ್ : ಸಿದ್ದರಾಮಯ್ಯ 

Bharath Vaibhav
ಈಗಿನ ದೇವೇಗೌಡರು ಬಿಜೆಪಿಯ ಚಿಯರ್ ಲೀಡರ್ : ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳ ಕುರಿತು ಸಂಸತ್‌ನಲ್ಲಿ ದೇವೇಗೌಡರು ಸಭೆಯ ಗಮನಸೆಳೆದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುದೀರ್ಘವಾದ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ನೀರಾವರಿ ಯೋಜನೆಗಳಿಗೆ ಸಹಾಯ ಮಾಡುವಂತೆ ದೇವೇಗೌಡರಿಗೆ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿದೆ

ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ.

ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ.

ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗ ಉದ್ಭವವಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ನಾನು ನಿಮ್ಮ ಮನೆಗೆ ಬಂದು ಕೈಹಿಡಿದು ಕರೆದುಕೊಂಡು ಬಂದು ಸರ್ವಪಕ್ಷಗಳ ಸಭೆ ನಡೆಸಿದ್ದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ.

ಹಿಂದೆಲ್ಲ ರಾಜ್ಯದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಒಬ್ಬ ಮುತ್ಸದ್ದಿಯಾಗಿ ಇದಕ್ಕಿಂತಲೂ ಮುಖ್ಯವಾಗಿ ಒಬ್ಬ ಹೆಮ್ಮೆಯ ಕನ್ನಡಿಗನಾಗಿ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದನ್ನು ರಾಜ್ಯದ ಜನರು ಗಮನಿಸಿದ್ದಾರೆ.

ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳುಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಎಂದು ಜನ ಪ್ರಶ್ನಿಸುತ್ತಿದ್ದಾರೆ..

ಮಹದಾಯಿ ಜಲಾನಯನ ಪ್ರದೇಶದ ಕಳಸಾ ನಾಲೆ ಯೋಜನೆಯ ರೂ.995.30 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ (ಡಿಪಿಆರ್ )ಗೆ 2023ರ ಮಾರ್ಚ್ ನಲ್ಲಿಯೇ ಅನುಮೋದನೆ ನೀಡಲಾಗಿದೆ.

ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ‍್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದರೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆಯ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಈ ಘೋಷಣೆಯ ಪ್ರಸ್ತಾವಕ್ಕೆ ಸಾರ್ವಜನಿಕ ಹೂಡಿಕೆ ಸಮಿತಿ ಈಗಾಗಲೇ ಅಂಗೀಕಾರ ನೀಡಿದೆ. ಆದರೆ ಕೇಂದ್ರ ಸರ್ಕಾರ ಮೀನಮೇಷ ಎಣಿಸುತ್ತಾ ಕೂತಿದೆ.

ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮತ್ತು 400 ಮೆಗಾವಾಟ್ ವಿದ್ಯುತ್ ಉತ್ಪಾದನೆಗಾಗಿಯೇ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯ ವಿವರಗಳೆಲ್ಲ ನಿಮಗೆ ಬಾಯಿಪಾಠದಲ್ಲಿರಬಹುದು. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ದೊರಕಿಸಿಕೊಟ್ಟರೆ ಬೆಂಗಳೂರು ನಿವಾಸಿಗಳು ಸದಾ ನಿಮಗೆ ಋಣಿಯಾಗಿರುತ್ತಾರೆ.

ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯನ್ನು ಸದ್ಯ ನೀರಾವರಿ ಕ್ಷೇತ್ರಕ್ಕಷ್ಟೇ ಸೀಮಿತಗೊಳಿಸುತ್ತಿದ್ದೇನೆ.

ಇನ್ನು ತೆರಿಗೆ ಹಂಚಿಕೆ, ಪ್ರಕೃತಿ ವಿಕೋಪ ಪರಿಹಾರ, ಕುಡಿಯುವ ನೀರು ಪೂರೈಕೆ, ರೈಲ್ವೆ ಯೋಜನೆಗಳ ವಿಚಾರದಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕವನ್ನು ಶತ್ರು ರಾಜ್ಯದಂತೆ ನಡೆಸಿಕೊಳ್ಳುತ್ತಿದೆ. ಈ ವಿಚಾರಗಳು ಕೂಡಾ ನಿಮಗೆ ಗೊತ್ತಿರುವುದರಿಂದ ಸಂಸತ್ ನಲ್ಲಿ ಈ ಬಗ್ಗೆ ನೀವು ದನಿ ಎತ್ತುತ್ತೀರಿ ಎಂದು ರಾಜ್ಯದ ಜನರು ನಿರೀಕ್ಷಿಸಿದ್ದರು.

ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಇದ್ದರೂ ನೀವು ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು.

ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ಆದರೆ ಈಗಿನ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ.

ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಡವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕೆಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲ ಇದೆ. ಏಳು ಕೋಟಿ ಕನ್ನಡಿಗರೂ ನಿಮ್ಮ ಜೊತೆಯಲ್ಲಿ ಇರುತ್ತಾರೆ ಎಂಬ ಭರವಸೆಯೂ ನನಗಿದೆ

WhatsApp Group Join Now
Telegram Group Join Now
Share This Article
error: Content is protected !!