ನವದೆಹಲಿ: ಬರ ಪರಿಹಾರಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ಹಣಕಾಸು ನೆರವು ಬಿಡುಗಡೆ ಮಾಡುವ ಕುರಿತು ತಮ್ಮ ಭಿನ್ನಾಭಿಪ್ರಾಯವನ್ನು ತಾವೇ ಪರಿಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಮತ್ತು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದೆ.
ರಾಜ್ಯಕ್ಕೆ ಎನ್‌ಡಿಆರ್‌ಎಫ್‌ನಿಂದ ಹಣಕಾಸು ನೆರವು ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಕರ್ನಾಟಕದ ಪರ ವಾದ ಮಂಡಿಸಿದ ವಕೀಲರು, ರಾಜ್ಯವು 18,171 ಕೋಟಿ ರೂ.ಗಳನ್ನು ಕೋರಿದ್ದು, 3,819 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಈ ವಿಚಾರದಲ್ಲಿ ಅಫಿಡವಿಟ್ ಸಲ್ಲಿಸಲು ಸ್ವಲ್ಪ ಕಾಲಾವಕಾಶದ ಅಗತ್ಯವಿದೆ ಎಂದು ನ್ಯಾಯಪೀಠದ ಮುಂದೆ ಮನವಿ ಮಾಡಿದರು.
ಇದೀಗ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿದೆ.