ಚೇಳೂರು : ತಾಲೂಕಿನ ಚಿಲಕಲನೇರ್ಪು ಗ್ರಾಮದಲ್ಲಿ ಕಳೆದ ಭಾನುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕದಸಂಸ) ವತಿಯಿಂದ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕದಸಂಸ ಜಿಲ್ಲಾ ಸಂಚಾಲಕರಾದ ಕಡ್ಡಿಲು ವೆಂಕಟರವಣಪ್ಪ, ದಲಿತರು ಮತ್ತು ಶೋಷಿತ ಸಮುದಾಯಗಳು ಸಂಘಟಿತರಾದಾಗ ಮಾತ್ರ ಸಮಾಜದಲ್ಲಿ ಹಕ್ಕುಗಳನ್ನು ಪಡೆಯಲು ಸಾಧ್ಯ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು. ಸಂಘಟನೆಯು ಬಲಿಷ್ಠವಾಗಿದ್ದರೆ ಮಾತ್ರ ಗ್ರಾಮ ಮಟ್ಟದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಕರೆ ನೀಡಿದರು.
ನಂತರ ಮಾತನಾಡಿದ ಚೇಳೂರು ತಾಲೂಕು ಅಧ್ಯಕ್ಷರಾದ ಪಿ. ಮಂಜುನಾಥ್, ಚೇಳೂರು ನೂತನ ತಾಲೂಕಾಗಿ ಹೊರಹೊಮ್ಮುತ್ತಿದ್ದು, ಈ ಭಾಗದ ದಲಿತರ ಧ್ವನಿಯಾಗಿ ಸಂಘಟನೆ ಕೆಲಸ ಮಾಡಲಿದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸಮಿತಿಯನ್ನು ರಚಿಸಿ, ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳುವುದು ನಮ್ಮ ಗುರಿಯಾಗಿದೆ. ಶೋಷಣೆಯ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು.
ಸಭೆಯಲ್ಲಿ ಚಿಲಕಲನೇರ್ಪು ಹೋಬಳಿ ಮತ್ತು ಪಂಚಾಯಿತಿ ವ್ಯಾಪ್ತಿಯ ವಿವಿಧ ಜವಾಬ್ದಾರಿಗಳಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘಟನೆಯ ಏಳಿಗೆಗೆ ಶ್ರಮಿಸುವಂತೆ ನೂತನ ಸದಸ್ಯರಿಗೆ ಈ ಸಂದರ್ಭದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಹಲವು ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು.
ವರದಿ : ಯಾರಬ್. ಎಂ.




