ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ವಿನಯ್ ಕುಲಕರ್ಣಿ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ.ಯೋಗೇಶ್ ಗೌಡ ಕೊಲೆ ಕೇಸ್ ನಲ್ಲಿ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ನೀಡಿದ್ದಾರೆ.
ನಾಳೆ ಶಿಕ್ಷೆ ಪ್ರಮಾಣದ ಬಗ್ಗೆ ವಾದ ಮಂಡನೆಯಾಗಲಿದೆ ಎಂದು ತಿಳಿಸಿರುವ ನ್ಯಾಯಾಲಯ 17 ಅಪರಾಧಿಗಳನ್ನು ತಕ್ಷಣ ವಶಕ್ಕೆ ಪಡೆಯಲು ಸಿಬಿಐ ಅಧಿಕಾರಿಗಳಿಗೆ ಸೂಚಿಸಿದೆ.
ಇನ್ನು ಈ ಪ್ರಕರಣದಲ್ಲಿ ಪ್ರಕರಣದ ಎ 20 ಹಾಗೂ ಎ 21 ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಶಿಕ್ಷೆ ಖಚಿತವಾಗಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಏ.9ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು. ತಾಂತ್ರಿಕ ಕಾರಣಗಳು ಹಾಗೂ ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಏ.15ಕ್ಕೆ ಮೂಂದೂಡಿತ್ತು.
ಇದೀಗ ನ್ಯಾಯಾಯಲಯ ಆರೋಪಿಗಳಾದ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣದ ಬಗ್ಗೆ ನಾಳೆ ವಾದ ಮಂಡನೆಯಾಗಲಿದೆ.
ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂ.15ರಂದು ಧಾರವಡದ ಉದಯ ಜಿಮ್ ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದರು.
ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಕೊಲೆಯಾದ ಯೋಗೇಶ್ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು.
ಈ ಕೊಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಕೈವಾಡವಿರುವ ಶಂಕೆ ಹಿನ್ನೆಲೆಯಲ್ಲಿ 2020ರ ನ.5ರಂದು ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು.




