ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಭಾಗಿಯಾಗಿ ಎಲ್ಲರೂ ಮತ ಚಲಾಯಿಸಿ.
ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ 28,269 ಮತಗಟ್ಟೆಗಳಲ್ಲಿ ನಡೆಯುವ ಮತದಾನದ ವೇಳೆ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆಯಲಿದ್ದಾರೆ.ಚುನಾವಣಾ ಅಖಾಡದಲ್ಲಿರುವ 227 ಅಭ್ಯರ್ಥಿಗಳ ಪೈಕಿ 206 ಪುರುಷರು, 21 ಮಹಿಳೆಯರಿದ್ದಾರೆ.
ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನವು ಮೇ 7 ರಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆ ವರೆಗೂ ನಡೆಯಲಿದ್ದು, ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ.
ಮತದಾನ ಶಾಂತಿಯುತ ಮತ್ತು ಸುಸೂತ್ರವಾಗಿ ನಡೆಯುವಂತೆ ಸಿ.ಆರ್.ಪಿ.ಸಿ. 144 ಜಾರಿಗೊಳಿಸಿದ್ದು, ಚುನಾವಣಾ ಸಿಬ್ಬಂದಿ ಹೊರತುಪಡಿಸಿ 5 ಜನಕ್ಕಿಂತ ಹೆಚ್ಚು ಗುಂಪಾಗಿ ಸೇರುವಂತಿಲ್ಲ. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ-1993ರ ನಿಯಮ 36 ರನ್ವಯ ಮತದಾನ ದಿನದಂದು ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಉತ್ಸವ ಹಾಗೂ ಉರುಸ್‍ಗಳನ್ನು ಸಹ ನಿಷೇಧಿಸಲಾಗಿದೆ.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.